ಬೆಂಗಳೂರು: ಶ್ರೀಲಂಕಾದಲ್ಲಿ ಬಾಂಬ್ ಬ್ಲಾಸ್ಟ್ ಆದ ಬೆನ್ನಲ್ಲೇ ಮಂಡ್ಯದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದು, ಇದೀಗ ಬೆಂಗಳೂರಿನಲ್ಲೂ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರಮುಖವಾಗಿ ಪ್ರಾರ್ಥನಾ ಮಂದಿರಗಳು ಮತ್ತು ಹೋಟೆಲ್ ಮಾಲೀಕರ ಜೊತೆ ಸಭೆ ನಡೆಸಿದ್ದಾರೆ.
ಹೌದು. ಶ್ರೀಲಂಕಾದಲ್ಲಿ ಬಾಂಬ್ ಬ್ಲಾಸ್ಟ್ ಬಳಿಕ ಬೆಂಗಳೂರಿನಲ್ಲೂ ಹೈ ಅಲರ್ಟ್ ಘೋಷಣೆ ಆಗಿದೆ. ಶ್ರೀಲಂಕಾ ಬಾಂಬ್ ಸ್ಫೋಟದ ಹಿಂದೆ ಐಸಿಸ್ ಕೈವಾಡ ಇದೆ ಎಂಬ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ಎಚ್ಚೆತ್ತ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಮಂದಿರ, ಮಸೀದಿ, ಚರ್ಚ್, ರೈಲು, ಬಸ್, ವಿಮಾನ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸುವಂತೆ ಖಡಕ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಬಾಂಬ್ ಬ್ಲಾಸ್ಟ್ – ಮಂಡ್ಯ ಜಿಲ್ಲೆಯಾದ್ಯಂತ ಕಟ್ಟೆಚ್ಚರ
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಎಲ್ಲ ಪಂಚತಾರ ಹೋಟೆಲ್ ಮಾಲೀಕರು, ಮಾಲ್ ಮಾಲೀಕರು, ಐಟಿ ಕಂಪನಿಗಳ ಮುಖ್ಯಸ್ಥರು ಹಾಗೂ ಸೆಕ್ಯೂರಿಟಿ ಆಫಿಸರ್‍ಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅನುಸರಿಸಬೇಕಾದ ಕ್ರಮಗಳು ಹಾಗೂ ಸ್ಫೋಟಕಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್‍ಕುಮಾರ್ ಮಾಹಿತಿ ನೀಡಿದ್ದಾರೆ. ಜನರ ರಕ್ಷಣೆಗಾಗಿ ಹೋಟೆಲ್‍ಗಳು ಯಾವ ರೀತಿ ಮುಂಜಾಗೃತಾ ಕ್ರಮಗಳನ್ನ ವಹಿಸಬೇಕು. ಮೆಟಲ್ ಡಿಟೆಕ್ಟರ್, ಲಗೇಜ್ ಸ್ಕ್ಯಾನಿಂಗ್, ಭದ್ರತೆಯ ನಿರ್ವಹಣೆ ಹೇಗೆ ಎಂದು ಪೊಲೀಸ್ ಆಯುಕ್ತರು ನಿರ್ದೇಶನ ನೀಡಿದ್ದಾರೆ.
ಸಭೆಯಲ್ಲಿ ನಗರದ ಎಲ್ಲಾ ವಿಭಾಗದ ಡಿಸಿಪಿಗಳು ಹಾಜರಾಗಿದ್ದರು. ಶಿವಾಜಿನಗರ ಚರ್ಚ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್ ಸೇರಿದಂತೆ ಎಲ್ಲ ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ಭದ್ರತೆ ನೀಡಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಆಯಾ ವಿಭಾಗದ ಡಿಸಿಪಿಗಳಿಗೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.