– ಫೆ.8ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ (High Court) ಸೂಚನೆ ನೀಡಿದೆ.
ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಕೋರ್ಟ್ ಅಂಗಳ ತಲುಪಿದ ಡಿಕೆಸು ಭಾರತ ವಿಭಜನೆ ಹೇಳಿಕೆ
ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ಘಟಕವನ್ನು ರಾಜಕೀಯ ಉದ್ದೇಶದಿಂದ ಸ್ಥಗಿತಗೊಳಿಸಲು ಒತ್ತಾಯಿಸಲಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಇದರಿಂದಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ.
ಬಳಿಕ ನ್ಯಾಯಾಲಯ, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ. ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಏನಿದು ಪ್ರಕರಣ? – ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿರುವ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವಂತೆ ಕಲಬುರಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜ.18ರಂದು ನೋಟಿಸ್ ಜಾರಿ ಮಾಡಿದ್ದರು. ಬಳಿಕ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿ ಜ.25ರಂದು ಆದೇಶ ಮಾಡಿತ್ತು. ಈ ಎರಡೂ ಆದೇಶವನ್ನು ರದ್ದುಮಾಡಬೇಕು ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಪೇಟಿಎಂ ವ್ಯಾಲೆಟ್ ಸೇವೆ ಖರೀದಿ ಮತುಕತೆ ನಡೆದಿಲ್ಲ – ಜಿಯೋ ಫೈನಾನ್ಸ್ ಅಧಿಕೃತ ಹೇಳಿಕೆ