ಬೆಂಗಳೂರು: ಕಾಯಕಯೋಗಿ, ತ್ರಿವಿಧ ದಾಸೋಹಿ, ಬಡ ಮಕ್ಕಳ ಜ್ಞಾನದಾತರಾಗಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಶಿಫಾರಸ್ಸು ಮಾಡುವಂತೆ ಗೃಹ ಸಚಿವ ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಏಪ್ರಿಲ್ 1 ರಂದು 110ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ನೀಡಬೇಕೆಂದು ಭಕ್ತ ವೃಂದದ ಬಯಕೆಯಾಗಿದೆ. ಈ ಕಾರಣದಿಂದ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿಯನ್ನು ನೀಡುವಂತೆ ರಾಜ್ಯಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
Advertisement
ಶ್ರೀ ಶಿವಕುಮಾರ ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. 100 ನೇವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ `ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಪುರಸ್ಕರಿಸಿತ್ತು. 2015ರಲ್ಲಿ ಭಾರತ ಸರ್ಕಾರ `ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.