ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳು ಪ್ರಯತ್ನ ಮುಂದುವರಿಸಿದ್ದಾರೆ. ಇನ್ನೂ ಕಾಂಗ್ರೆಸ್ ಅಧಿಕೃತವಾಗಿ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಹೈಕಮಾಂಡ್‍ಗೆ ವಿಧಾನಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಮತ್ತು ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಹೆಸರುಗಳನ್ನು ರವಾನೆ ಮಾಡಲಾಗಿದೆ.
ಮಾನೆ ಮತ್ತು ಮನೋಹರ್ ತಹಶೀಲ್ದಾರ್ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಂಧಾನ ಮಾಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಇಬ್ಬರ ನಡುವೆ ಸಂಧಾನ ಮಾಡಿ, ಒಬ್ಬರಿಗೆ ಟಿಕೆಟ್, ಮತ್ತೊಬ್ಬರಿಗೆ ಪರ್ಯಾಯ ಸ್ಥಾನ ನೀಡುತ್ತೇವೆ. ಇಬ್ಬರಲ್ಲಿ ಯಾರಿಗೆ ಟಿಕೆಟ್ ದೊರೆತರೂ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಡಿಕೆಶಿ ಮತ್ತು ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಮುನ್ನಡೆ
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆಗೆ ಕಾಂಗ್ರೆಸ್ ಟಿಕೆಟ್ ಎನ್ನುತ್ತಿದ್ದರೂ ಇನ್ನೂ ಅಧಿಕೃತವಾಗಿ ಅಭ್ಯರ್ಥಿಯ ಹೆಸರು ಘೋಷಣೆಯಾಗಿಲ್ಲ. ಒಟ್ಟಿನಲ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಟಿಕೆಟ್ ಯಾರಿಗೆ ನೀಡುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.