ನವದೆಹಲಿ: ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ (Honeymoon Murder Case) ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ (Sonam Raghuvanshi) ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ವಿಚಾರಣೆ ಅಥವಾ ಪ್ರಮುಖ ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ (Supreme Court) ಸಲಹೆ ನೀಡಿದೆ. ಈ ಎರಡು ಆಯ್ಕೆಗಳನ್ನು ನೀಡಿ ಮುಖ್ಯ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೆ ಶರಣಾಗುವುದು ಸೂಕ್ತವೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯ ಹೊರಹಾಕಿದೆ. ಇದನ್ನೂ ಓದಿ: ಹನಿಮೂನ್ ಮರ್ಡರ್ | ನನ್ನ ಮಗಳು 100% ಮುಗ್ಧೆ – CBI ತನಿಖೆಗಾಗಿ ಅಮಿತ್ ಶಾಗೆ ಮನವಿ ಮಾಡ್ತೇನೆ: ಸೋನಮ್ ತಂದೆ

ಎರಡನೇ ಆಯ್ಕೆಯನ್ನು ತೆಗೆದುಕೊಂಡರೆ, ಸಾರ್ವಜನಿಕ ಸಾಕ್ಷಿಗಳ ವಿಚಾರಣೆಯನ್ನು ತ್ವರಿತಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡುತ್ತೇವೆ. ನಂತರ ನಿಮ್ಮ ಜಾಮೀನು ಅರ್ಜಿಯನ್ನು ತೆಗೆದುಕೊಳ್ಳಬಹುದು. ಈ ಬಗ್ಗೆ ಸ್ಪಷ್ಟವಾದ ನಿರ್ಧಾರ ತೆಗೆದುಕೊಳ್ಳುವಂತೆ ಪೀಠ ಹೇಳಿದೆ.
ವಿಚಾರಣಾ ನ್ಯಾಯಾಲಯವು ಶಿಲ್ಲಾಂಗ್‌ನಲ್ಲಿಯೇ ಇದ್ದು ಪ್ರತಿದಿನ ವಿಚಾರಣೆಗೆ ಹಾಜರಾಗುವಂತೆ ಕಠಿಣ ಷರತ್ತುಗಳನ್ನು ವಿಧಿಸಿದೆ ಎಂದು ಸೋನಮ್ ಪರ ವಕೀಲರು ಪೀಠದ ಗಮನಕ್ಕೆ ತಂದರು. ಈ ವಿಚಾರವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಪೀಠ ಹೇಳಿತು. ಅಲ್ಲದೇ ಬಂಧನಕ್ಕೆ ಕಾರಣ ನೀಡದಿರುವ ಬಗ್ಗೆ ಅರ್ಜಿ ಸಲ್ಲಿಸುವಲ್ಲಿ ವಿಳಂಬದ ಬಗ್ಗೆಯೂ ಫೀಠ ಪ್ರಶ್ನಿಸಿದೆ. ಜುಲೈ 23ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.
ಸೋನಮ್‌ಗೆ ಜಾಮೀನು ಸಿಕ್ಕಿದ್ದು ಹೇಗೆ?
ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೂ ವಿಚಾರಣಾ ನ್ಯಾಯಾಲಯ ಸೋನಮ್‌ಗೆ ನೀಡಿದ್ದ ಜಾಮೀನನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿತ್ತು.
ವಿಚಾರಣೆ ವೇಳೆ, ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ, ಪೊಲೀಸರು ಅಂತಿಮ ದಾಖಲೆಗಳನ್ನು ಸಿದ್ಧಪಡಿಸುವಾಗ ಯಾವುದೇ ವಿವೇಚನೆ ಬಳಸಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಬಂಧನದ ವಾರಂಟ್‌ನಲ್ಲಿ ಸೋನಮ್ ಮೇಲಿರುವ ನೈಜ ಆರೋಪಗಳು ಅಥವಾ ಸೆಕ್ಷನ್‌ಗಳನ್ನು ಸರಿಯಾಗಿ ಉಲ್ಲೇಖಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಹೇಳಿ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದ್ದರು.
ಏನಿದು ಪ್ರಕರಣ
ಮಧ್ಯಪ್ರದೇಶದ ಇಂದೋರ್ ನಿವಾಸಿಯಾದ ಸೋನಂ ರಘುವಂಶಿಯನ್ನು ತನ್ನ ಪತಿ ರಾಜಾ ರಘುವಂಶಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜೂನ್‌ನಲ್ಲಿ ಬಂಧಿಸಲಾಗಿತ್ತು. 2025ರ ಮೇ 23ರಂದು ಮೇಘಾಲಯದ ಸೋಹ್ರಾ ಪ್ರದೇಶಕ್ಕೆ ಹನಿಮೂನ್‌ಗೆ ಹೋಗಿದ್ದ ಈ ದಂಪತಿ ನಾಪತ್ತೆಯಾಗಿದ್ದರು. ತದನಂತರ ಜೂನ್ 2ರಂದು ರಾಜಾ ರಘುವಂಶಿ ಅವರ ಮೃತದೇಹ ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು. ಆರ್ಥಿಕ ಲಾಭಕ್ಕಾಗಿ ಸೋನಂ ಬಾಡಿಗೆ ಹಂತಕರೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಮೇಘಾಲಯ ಪೊಲೀಸರು ಆರೋಪಿಸಿದ್ದಾರೆ. ಇದನ್ನೂ ಓದಿ: ಹನಿಮೂನ್ ಹಂತಕಿ ಸೋನಮ್‌ಗೆ ಬಿಗ್ ರಿಲೀಫ್ – ಬೇಲ್ ರದ್ದಿಗೆ ಸುಪ್ರೀಂ ನಕಾರ
