ಬೆಂಗಳೂರು: ಇ-ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತಿ ಪಿಡಿಒ ಹಾಗೂ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಚೊಕ್ಕಹಳ್ಳಿ ಪಂಚಾಯತಿಯಲ್ಲಿ ನಡೆದಿದೆ.
ಪಂಚಾಯಿತಿಯಲ್ಲಿ ಹಲವು ದಿನಗಳಿಂದ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ನರ್ಮದಾ ಹಾಗೂ ಕಂಪ್ಯೂಟರ್ ಆಪರೇಟರ್ ಮುನಿರಾಜು ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಇ-ಖಾತೆಯನ್ನು ಮಾಡಿಕೊಡಲು 6 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಇಂದು ಮುಂಗಡವಾಗಿ 4 ಸಾವಿರ ರೂ.ಗಳನ್ನು ಪಡೆಯುತ್ತಿದ್ದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಎಸಿಬಿ ಡಿವೈಎಸ್‍ಪಿ ಗೋಪಾಲ್ ಜಗ್ಗಿನ್ ನೇತೃತ್ವದ ತಂಡ ದಾಳಿ ನಡೆಸಿ ಹಣದ ಸಮೇತ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
Advertisement
ಪಂಚಾಯಿತಿಯಲ್ಲಿ ಸಾಮಾನ್ಯ ಜನರು ಯಾವುದೇ ಕೆಲಸ ಮಾಡಿಕೊಡಿ ಎಂದು ಕೇಳಿದರೂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದರು. ಈ ಬಗ್ಗೆ ಹಲವು ದಿನಗಳಿಂದ ಎಸಿಬಿ ಕಚೇರಿಗೆ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಲಂಚ ಪಡೆಯುತ್ತಿದ್ದ ಅಧಿಕಾರಿಗಳು ಸದ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ.