ನವದೆಹಲಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ (West Bengal) ಸರ್ಕಾರದ ಅಧಿಸೂಚನೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕಟುವಾಗಿ ಟೀಕಿಸಿದ್ದಾರೆ. ಅಲ್ಲದೇ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಚಾಟಿ ಬೀಸಿದ್ದಾರೆ.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆದ ಬಳಿಕ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಿದ್ದುಪಡಿ ಮಾಡಲು ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ನಿರ್ದೇಶಿಸಿಸಿದೆ.
ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಗೆ ಹೇಳುತ್ತೀರಿ? ಅವರು ರಿಯಾಯಿತಿಯನ್ನು ಬಯಸುವುದಿಲ್ಲ. ಅದಕ್ಕೆ ಪರಿಹಾರವೆಂದರೆ, ನೀವು ಭದ್ರತೆಯನ್ನು ನೀಡಬೇಕು. ಪಶ್ಚಿಮ ಬಂಗಾಳ ಅಧಿಸೂಚನೆಯನ್ನು ಸರಿಪಡಿಸಬೇಕು. ಭದ್ರತೆ ಒದಗಿಸುವುದು ನಿಮ್ಮ ಕರ್ತವ್ಯ, ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಳಲಾಗುವುದಿಲ್ಲ. ಮಹಿಳೆಯರು ಪೈಲಟ್‍ಗಳಾಗಿ, ಸೇನೆಯಲ್ಲಿ ರಾತ್ರಿ ಕೆಲಸ ಮಾಡುತ್ತಾರೆ ಎಂಬುದನ್ನು ನೀವು ಗಮನಿಸಬೇಕು ಎಂದು ಸರ್ಕಾರದ ಪರ ವಾದ ಮಂಡಿಸಿದ ವಕೀಲ ಸಿಬಲ್ ಅವರಿಗೆ ಸಿಜೆಐ ಸೂಚಿಸಿದರು.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Hospital) ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪೀಠವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಪ್ರಸ್ತುತ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ.
ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಘಟನೆಯ ಕುರಿತು ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಧಾನ ಸಲಹೆಗಾರ ಅಲಾಪನ್ ಬಂಡೋಪಾಧ್ಯಾಯ ಅವರು ಮಹಿಳಾ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ನೂತನ ಕ್ರಮಗಳನ್ನು ಘೋಷಿಸಿದ್ದರು.
ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಮಹಿಳಾ ಸ್ನೇಹಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಸ್ಥಳೀಯ ಪೊಲೀಸರಿಂದ ನಿತ್ಯ ರಾತ್ರಿ ಗಸ್ತು ತಿರುಗಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾತ್ರಿ ಕರ್ತವ್ಯದ ವೇಳೆ ಮಹಿಳಾ ವೈದ್ಯರು ಜೋಡಿಯಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಶಿಫ್ಟ್ ವ್ಯವಸ್ಥೆ ಮಾಡಲಾಗುವುದು. ಈ ಮಾರ್ಗಸೂಚಿಗಳನ್ನು ಅನುಸರಿಸಲು ಖಾಸಗಿ ಆರೋಗ್ಯ ಕೇಂದ್ರಗಳಿಗೂ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.