ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಭಾರತೀಯ ಜನತಾ ಪಾರ್ಟಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಸ್‍ಸಿ, ಎಸ್‍ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಬೀಳಗಿ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಅತ್ಯಂತ ಭಾವನಾತ್ಮಕ ಅಭಿಪ್ರಾಯವನ್ನು ಹೊಂದಿರುವ ದಲಿತ ಸಮುದಾಯ ಹಾಗೂ ಅಂಬೇಡ್ಕರ್ ಅವರ ಬಗ್ಗೆ ತಪ್ಪು ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದು ಮಾತು ಆರಂಭಿಸಿದರು. ಆಗ ಮಾತಿನ ಭರಾಟೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಭಾರತೀಯ ಜನತಾ ಪಾರ್ಟಿ ಅನ್ಯಾಯ ಮಾಡುತ್ತಿದ್ದಾರೆ ಎಂದರು.
Advertisement
Advertisement
ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವವನ್ನು ತಿರುಚುವಂತ ಹಾಗೂ ದೇಶದಲ್ಲಿ ಕೋಮುವಾದ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಅಲ್ಲದೇ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಮಂಗಳವಾರ ಪ್ರತಿಭಟನೆಗೆ ಕರೆ ನೀಡಿರುವ ಕಾಂಗ್ರೆಸ್ ಶಾಸಕರ ನಡೆಯನ್ನು ಬಿಜೆಪಿ ಖಂಡಿಸುತ್ತದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವದ ಕಾಯಿದೆ ಕುರಿತು ಜನಜಾಗೃತಿಯಿಂದ ಜನರು ಅರ್ಥಮಾಡಿಕೊಂಡು ಸುಮ್ಮನಾಗಿದ್ದರು. ಆದರೇ ಪೌರತ್ವ ಕಾಯ್ದೆಯ ತೀವ್ರತೆ ಕಡಿಮೆಯಾದಾಗ ಕಾಂಗ್ರೆಸ್ ಅಲ್ಪಸಂಖ್ಯಾತರಲ್ಲಿ ಕೋಮುವಾದದ ಬೀಜ ಬಿತ್ತಿ ದೇಶದಲ್ಲಿರುವ ಏಕತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದರು.
Advertisement
ಈ ಸಂದರ್ಭದಲ್ಲಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಹೇಂದ್ರ ಕೌತಾಳ, ರಂಗನಾಯಕ ತಪೆಲಾ, ಅರುಣ ಹುದ್ದಲಿ, ಸಂತೋಶ ಅರಕೇರಿ, ಚಂದ್ರಶೇಖರ ಗೋಕಾಕ, ಹನಮಂತಪ್ಪ ದೊಡ್ಡಮನಿ ಸೇರಿದಂತೆ ಇತರರು ಇದ್ದರು.