– ಕಾರು, ಬಸ್ ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ
ಧಾರವಾಡ: ಸರ್ಕಾರಿ ಸಾರಿಗೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಡೇವಿಸ್ ಸುಧಾಕರ್ ಮೃತ ದುರ್ದೈವಿ. ಉಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ. ಅಣ್ಣಿಗೇರಿ ಸಮೀಪದ ಭದ್ರಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ಯಾರಾಲಿಸಿಸ್‍ನಿಂದ ಬಳಲುತ್ತಿದ್ದ ತಾಯಿಯನ್ನು ಕಾರಿನಲ್ಲಿ ಕರೆದುಕೊಂಡು ಡೇವಿಸ್ ಸುಧಾಕರ್ ಕಾರವಾರಕ್ಕೆ ಪ್ರಯಾಣ ಬೆಳೆಸಿದ್ದರು. ಹುಬ್ಬಳ್ಳಿ-ಗದಗ ಹೆದ್ದಾರಿ ದುರಸ್ತಿ ಕಾಮಗಾರಿ ನಡೆದಿದ್ದು, ವೇಗವಾಗಿ ಬಂದ ಕಾರು ಹಾಗೂ ಬಸ್ ಚಾಲಕರ ನಿಯಂತ್ರಣ ತಪ್ಪಿ ಭದ್ರಾಪೂರ ಗ್ರಾಮದ ಬಳಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿ ಹೊಡೆದಿದ್ದು, ಕಾರು ನುಜ್ಜುಗುಜ್ಜು ಆಗಿದೆ. ಕಾರಿನಲ್ಲಿದ್ದ ಡೇವಿಸ್ ಸುಧಾಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಸ್‍ನಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅಣ್ಣಿಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಬಸ್ ಪಲ್ಟಿ ಹೊಡೆದರೂ ಅನೇಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಅಣ್ಣಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆಗಾಗಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.