ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್‌ಗೆ(NICE) ಹೇಗೆ ಪಾಠ ಕಲಿಸಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಆಕ್ರೋಶ ಹೊರಹಾಕಿದ್ದಾರೆ.
ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು (Bengaluru) ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ನೈಸ್ ಸಂಸ್ಥೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆ ಅವರು ತಕರಾರು ಎತ್ತಿದ್ದಾರೆ. ನೈಸ್ ನವರು ತಾವು ಸರ್ಕಾರಕ್ಕಿಂತ ದೊಡ್ಡವರು ಎಂದು ಭಾವಿಸಿದ್ದಾರೆ. ಹೀಗಾಗಿ ಬೇರೆ ದಾರಿ ಹುಡುಕುತ್ತೇವೆ. ಅವರಿಗೆ ಹೇಗೆ ಪಾಠ ಕಲಿಸಬೇಕು ಎಂಬುದು ಗೊತ್ತಿದೆ. ಹೀಗಾಗಿ ಸ್ಕೈಡೆಕ್ ಗಾಗಿ ನಾವು ಬೇರೆ ಕಡೆ ಬಿಡಿಎ ಜಾಗ ಗುರುತಿಸಿದ್ದೇವೆ. ವಿಮಾನ ಹಾರಾಟದ ಟವರ್ ಸಮಸ್ಯೆ ಇರುವ ಕಾರಣ ಇದನ್ನು ಸೂಕ್ತ ಜಾಗದಲ್ಲಿ ನಿರ್ಮಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕುರ್ಚಿ ಕದನಕ್ಕೆ ಟ್ವಿಸ್ಟ್ – ಹೊಸ ವರ್ಷದ ಮೊದಲ ದಿನವೇ ಸಿಎಂ ಪವರ್‌ಫುಲ್ ಸಂದೇಶ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ದೂರು ಹೇಳುತ್ತಿದ್ದರು. ಹೀಗಾಗಿ ನಾವು ತ್ವರಿತ ಗತಿಯಲ್ಲಿ ಪರಿಹಾರ ಕಂಡು ಹಿಡಿದಿದ್ದೇವೆ. ಆಮೂಲಕ ಸಂಚಾರ ದಟ್ಟಣೆ ನಿವಾರಿಸಿದ್ದೇವೆ ಎಂದರು. ಇದನ್ನೂ ಓದಿ: ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು – ಎಸ್.ಆರ್.ವಿಶ್ವನಾಥ್
ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಒಂದೂವರೇ ಕಿ.ಮೀ ಟನಲ್ ರಸ್ತೆ ಬರಲಿದೆ. ಮೇಕ್ರಿ ವೃತ್ತದ ಬಳಿ ಮೇಲ್ಸೇತುವೆ ಸಾಗಲಿದೆ. ಇದನ್ನು ಮೂರು ಭಾಗವಾಗಿ ಕಟ್ಟಲಾಗುವುದು. ಇನ್ನು ತುಮಕೂರು ರಸ್ತೆಯಿಂದ ಕೆ.ಆರ್ ಪುರದ ವರೆಗೆ ಮೇಲ್ಸೇತುವೆ ಮೂಲಕ ಹೊರ ವರ್ತುಲ ರಸ್ತೆ (ORR) ಮಾಡಲು ಮುಂದಾಗಿದ್ದೇವೆ ಎಂದು ವಿವರಿಸಿದರು.

