ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಕ್ರಿಕೆಟಿಗ, ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಂದ ರಾಷ್ಟ್ರೀಯತೆಯ ಪಾಠವನ್ನು ಕಲಿಯಬೇಕು ಎಂದು ತಿಳಿಸಿದ್ದಾರೆ.
Advertisement
Advertisement
70 ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಬಿಜೆಪಿ ಪದೇ ಪದೇ ಹೇಳಿಕೆ ನೀಡುತ್ತಿರುವುದರ ವಿರುದ್ಧ ಸಿಂಗ್ ಹರಿಹಾಯ್ದರು. ಅಲ್ಲದೆ ಒಂದು ಚಿಕ್ಕ ಸೂಜಿಯಿಂದ ಹಿಡಿದು ದೊಡ್ಡ ವಿಮಾನದವರೆಗಿನ ಅಭಿವೃದ್ಧಿಯನ್ನು ಕಾಂಗ್ರೆಸ್ ಅವಧಿಯಲ್ಲೇ ಮಾಡಲಾಗಿತ್ತು ಎಂದು ತಿರುಗೇಟು ನೀಡಿದರು.
Advertisement
ಇದೇ ವೇಳೆ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರ ಹತ್ಯೆಯ ಬಳಿಕ ಕಾಂಗ್ರೆಸ್ಸನ್ನು ಮುನ್ನಡೆಸಿದ ಸೋನಿಯಾ ಗಾಂಧಿಯವರನ್ನು ಹೊಗಳಿದ ಸಿಧು, ಸೋನಿಯಾ ಗಾಂಧಿಯವರಿಂದಾಗಿಯೇ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ 10 ವರ್ಷ (2004-2014) ರವರೆಗೆ ಆಡಳಿತ ನಡೆಸಲು ಸಾಧ್ಯವಾಯಿತು ಎಂದರು.
Advertisement
ರಫೇಲ್ ಯುದ್ಧ ವಿಮಾನ ವಿವಾದವೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ಸೋಲಿಗೆ ಕಾರಣವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ನವಜೋತ್ ಸಿಂಗ್ ಅವರು ಮೊದಲು ಬಿಜೆಪಿಯಲ್ಲಿದ್ದು, ಪಂಜಾಬ್ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಇದೀಗ ಅವರು ಪಂಜಾಬ್ ಸಚಿವರಾಗಿದ್ದಾರೆ.