ನವದೆಹಲಿ: ಪಹಲ್ಗಾಮ್‌ನಲ್ಲಿ (Pahalgam) ನಡೆದ ಹಿಂದೂಗಳ ನರಮೇಧ ಕೃತ್ಯಕ್ಕೆ ಭಾರತ ಪ್ರತೀಕಾರದ ಪಣ ತೊಟ್ಟಿದೆ. ಉಗ್ರರು ಊಹೆಯೂ ಮಾಡದಂತಹ ಶಿಕ್ಷೆ ಅನುಭವಿಸ್ತಾರೆ ಅಂತ ಪ್ರಧಾನಿ ಮೋದಿ (PM Modi) ಕಟು ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಕೇಂದ್ರ ಸರ್ಕಾರ ನೀಡಿರುವ ಗಡುವನ್ನು ಮೀರಿ ದೇಶದಲ್ಲಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಈ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ. ಎಲ್ಲಾ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು (Pakistanis) ಪತ್ತೆಹಚ್ಚಿ ದೇಶದಿಂದ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದಾರೆಂದು ವರದಿಯಾಗಿದೆ. ಇದನ್ನೂ ಓದಿ: ಉಗ್ರರು ದಾಳಿ ಮಾಡಿಲ್ಲ ಎಂದ ನ್ಯೂಯಾರ್ಕ್ ಟೈಮ್ಸ್ – ವರದಿಯನ್ನು ಸರಿ ಮಾಡಿದ ಅಮೆರಿಕ ಸರ್ಕಾರ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಪಾಕ್ ಸಂಬಂಧ ಕಡಿದುಕೊಂಡ ಭಾರತ ಸರ್ಕಾರದ ʻಪಂಚʼ ನಿರ್ಣಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳ ವೀಸಾ ರಸ್ಸುಗೊಳಿಸುವುದು ಒಂದಾಗಿದೆ. ಇದನ್ನೂ ಓದಿ: ಬಿಡುಗಡೆ ಮಾಡದೇ ಬಿಎಸ್‌ಎಫ್ ಯೋಧನನ್ನು ಪ್ರಚಾರಕ್ಕೆ ಬಳಸಲು ಮುಂದಾದ ಪಾಕ್
ಭಾರತ ಸರ್ಕಾರ ಕೈಗೊಂಡ ಕ್ರಮಗಳೇನು?
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ. ಅಷ್ಟೇ ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಹೇಳಿದೆ. ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.
ಪಾಕ್ ಸರ್ಕಾರದ ಪ್ರಮುಖ ನಿರ್ಣಯಗಳೇನು?
* ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಭಾರತದ ನಿರ್ಧಾರವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಈ ಒಪ್ಪಂದವು ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಅಂತಾರಾಷ್ಟ್ರೀಯ ಒಪ್ಪಂದವಾಗಿದ್ದು, ಏಕಪಕ್ಷೀಯವಾಗಿ ಅಮಾನತುಗೊಳಿಸಲಾಗುವುದಿಲ್ಲ ಎಂದು NSC ಹೇಳಿದೆ.
* ಭಾರತವು ನೀರನ್ನು ನಿಲ್ಲಿಸಲು ಅಥವಾ ಬೇರೆಡೆಗೆ ತಿರುಗಿಸಲು ಪ್ರಯತ್ನಿಸಿದರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಪೂರ್ಣ ಬಲದಿಂದ ಪ್ರತಿಕ್ರಿಯಿಸಲಾಗುತ್ತದೆ ಎಂದು ಪಾಕಿಸ್ತಾನ ಹೇಳಿದೆ.
* ಶಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ನಾವು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಪಾಕಿಸ್ತಾನ ಹೇಳಿದೆ.
* ಜೊತೆಗೆ ಪಾಕಿಸ್ತಾನ ಸಹ ವಾಘಾ ಗಡಿಯನ್ನು ತಕ್ಷಣದಿಂದಲೇ ಮುಚ್ಚುತ್ತಿದ್ದು, ಅನುಮತಿ ಇರುವವರು ಮಾತ್ರ ಏಪ್ರಿಲ್ 30ರ ಒಳಗೆ ಹಿಂದಿರುಗಬಹುದು.
* ಸಾರ್ಕ್ ವೀಸಾ ಯೋಜನೆಯಡಿಯಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳ ವೀಸಾಗಳನ್ನು ರದ್ದುಪಡಿಸಲಾಗಿದೆ. ಸಿಖ್ ಯಾತ್ರಿಕರಿಗೆ ಮಾತ್ರ ವಿನಾಯಿತಿ ನೀಡಲಾಗುವುದು. ಉಳಿದ ಭಾರತೀಯರು 48 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ.
* ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಲಹೆಗಾರರಿಗೆ ಪಾಕಿಸ್ತಾನ ತೊರೆಯುವಂತೆ ಆದೇಶಿಸಲಾಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯನ್ನ 30ಕ್ಕೆ ಇಳಿಸಲಾಗಿದೆ.
* ಭಾರತದೊಂದಿಗಿನ ಎಲ್ಲಾ ವ್ಯಾಪಾರ ಒಪ್ಪಂದ ಬಂದ್‌ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಏನಿದು ಘಟನೆ?
ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು, ವಿದೇಶಿಯರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿ ನಡೆಸಿದ ಭೀಕರ ದಾಳಿ ಇದಾಗಿದೆ. ಇದುವರೆಗೂ ಭದ್ರತಾಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಉಗ್ರರು, ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಅಮಾಯಕ ಪ್ರವಾಸಿಗರನ್ನು ಟಾರ್ಗೆಟ್ ಮಾಡಿದ್ದಾರೆ. ಆ ಮೂಲಕ ಕಣಿವೆಯಲ್ಲಿ ಆತಂಕ, ಭಯದ ವಾತಾವರಣ ಮರುಕಳಿಸಿದೆ. ಅದರಲ್ಲೂ ಪುರುಷನ್ನೇ ಗುರಿಯಾಗಿಸಿಕೊಂಡು, ನೀನು ಹಿಂದೂನಾ, ಮುಸ್ಲಿಮನಾ? ಅಂತ ಖಚಿತಪಡಿಸಿಕೊಂಡು ಕೊಲ್ಲಲಾಗಿದೆ. ಇದನ್ನೂ ಓದಿ: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಬ್ರೇಕ್ – ಪಾಕಿಸ್ತಾನಕ್ಕೆ ಅಧಿಕೃತ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಿದ ಭಾರತ