ಕೊಪ್ಪಳ: ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಿದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಾನೇ ಮುಂದಾಳತ್ವ ವಹಿಸುತ್ತೇನೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಇಂದು ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ನೀನು ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದಾಗ ಹೈದ್ರಾಬಾದ್ ಕರ್ನಾಟಕಕ್ಕೇ ಏನು ಮಾಡಿದ್ದೀಯಾ? ಉತ್ತರ ಕರ್ನಾಟಕವನ್ನು ನೀನು ನಿರ್ಲಕ್ಷಿಸಿದ್ದೀಯಾ? ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಆರಂಭಿಸಿದ್ರು.
ಈಗಾಗಲೇ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ. ಇದೇ ರೀತಿ ತಾರತಮ್ಯ ಮಾಡಿದರೆ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗುತ್ತೆ. ನನಗೆ ಅಖಂಡ ಕರ್ನಾಟಕ ಬೇಕಾಗಿದೆ. ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಿದ್ರೆ ನಾನೇ ಪ್ರತ್ಯೇಕ ರಾಜ್ಯದ ಮುಂದಾಳತ್ವ ವಹಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಈಗಾಗಲೇ ಉತ್ತರ ಕರ್ನಾಟಕದ ಐದಾರು ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. ಬಿಜೆಪಿಯವರು ಗೆದ್ದ ಕಡೆ ಅನುದಾನ ಕೊಟ್ಟಿಲ್ಲ. ಹೀಗಾಗಿ ಮೈತ್ರಿ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವನ್ನು ಕಳೆದುಕೊಂಡಿದ್ದೇವೆ ಎಂದು ಗರಂ ಆಗಿ ಹೇಳಿದ್ದಾರೆ.