ಮಂಡ್ಯ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದ್ದು, ಮಂಡ್ಯ ನಗರದಲ್ಲಿ ಬಹುನಿರೀಕ್ಷಿತ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪಕೇಂದ್ರ ಹಾಗೂ ಕ್ಯಾನ್ಸರ್ ಆಸ್ಪತ್ರೆಯನ್ನ (Cancer Hospital) ಮುಂಬರುವ ಡಿಸೆಂಬರ್ ತಿಂಗಳಲ್ಲೇ ಕಾರ್ಯಾರಂಭಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ (N Chaluvaraya Swamy) ಹಾಗೂ ಮಂಡ್ಯ ಶಾಸಕ ಗಣಿಗ ರವಿ ಅವರ ನೇತೃತ್ವದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
100 ಹಾಸಿಗೆಗಳ ಜಯದೇವ ಆಸ್ಪತ್ರೆ ನಿರ್ಮಾಣ
ಮಂಡ್ಯದಲ್ಲಿ ಸುಸಜ್ಜಿತ 100 ಹಾಸಿಗೆಗಳ ಜಯದೇವ ಆಸ್ಪತ್ರೆ (Jayadeva Hospital) ನಿರ್ಮಾಣಕ್ಕೆ 5 ಎಕರೆ ಜಮೀನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಟಿಬಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ಸೇವೆ
ಶಾಶ್ವತ ಕಟ್ಟಡ ನಿರ್ಮಾಣವಾಗುವವರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಮಂಡ್ಯದ ಟಿಬಿ ಆಸ್ಪತ್ರೆಯ ಆವರಣದಲ್ಲೇ ತಾತ್ಕಾಲಿಕವಾಗಿ ಜಯದೇವ ಉಪಕೇಂದ್ರ ಆರಂಭವಾಗಲಿದೆ. ಇದಕ್ಕಾಗಿ ಅಗತ್ಯ ವೈದ್ಯಕೀಯ ಉಪಕರಣಗಳ ಅಳವಡಿಕೆ, ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನ ಸಮರೋಪಾದಿಯಲ್ಲಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ.
ಕ್ಯಾನ್ಸರ್ ಆಸ್ಪತ್ರೆಗೆ ಚಾಲನೆ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಂಡ್ಯ ಕ್ಯಾನ್ಸರ್ ಆಸ್ಪತ್ರೆಯ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿ, ಡಿಸೆಂಬರ್ನಲ್ಲಿ ಸಾರ್ವಜನಿಕ ಸೇವೆಗೆ ಸಮರ್ಪಿಸಲು ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.
ಡಿಸೆಂಬರ್ನಲ್ಲಿ ಮುಖ್ಯಮಂತ್ರಿಗಳಿಂದ ಉದ್ಘಾಟನೆ
ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯಲಿರುವ ಕಾರಣ, ಡಿಸೆಂಬರ್ ಎರಡನೇ ಅಥವಾ ಕೊನೆಯ ವಾರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದಿನಾಂಕ ಪಡೆದು ಎರಡೂ ಆಸ್ಪತ್ರೆಗಳನ್ನ ವಿದ್ಯುಕ್ತವಾಗಿ ಲೋಕಾರ್ಪಣೆ ಮಾಡಲು ತೀರ್ಮಾನಿಸಲಾಗಿದೆ.
ದೂರದ ಊರುಗಳಿಗೆ ಅಲೆದಾಟ ತಪ್ಪಲಿದೆ
ಈ ಎರಡು ಆಸ್ಪತ್ರೆಗಳು ಕಾರ್ಯಾರಂಭಗೊಂಡರೆ ಹೃದಯ ಸಂಬಂಧಿ ಕಾಯಿಲೆ ಹಾಗೂ ಕ್ಯಾನ್ಸರ್ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲೆಯ ಬಡ ಮತ್ತು ಮಧ್ಯಮ ವರ್ಗದ ರೋಗಿಗಳು ಮೈಸೂರು ಅಥವಾ ಬೆಂಗಳೂರಿಗೆ ಅಲೆದಾಡುವುದು ತಪ್ಪಲಿದೆ. ತುರ್ತು ಸಂದರ್ಭಗಳಲ್ಲಿ ಗೋಲ್ಡನ್ ಅವರ್ನಲ್ಲಿ ಸ್ಥಳೀಯವಾಗಿಯೇ ಸೂಕ್ತ ಚಿಕಿತ್ಸೆ ದೊರೆಯುವುದರಿಂದ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹಾಗೂ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

