– ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಮೋದಿ ಮಾತು
ನವದೆಹಲಿ: ರಾಜ್ಯಗಳು ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು. ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಸಾರ್ವಜನಿಕರು ಕೋಪಗೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರ ನಂಬಿಕೆಯನ್ನು ಪುನಃಸ್ಥಾಪಿಸಲು ತ್ವರಿತ ತನಿಖೆ ಮತ್ತು ಶಿಕ್ಷೆಯ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ, ಕೋಲ್ಕತ್ತಾದ (Kolkata) ಆಸ್ಪತ್ರೆಯೊಂದರಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಕುರಿತು ನಡೆಯುತ್ತಿರುವ ಭಾರೀ ಪ್ರತಿಭಟನೆಗಳ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಇಂದು ಕೆಂಪು ಕೋಟೆಯಿಂದ ಮತ್ತೊಮ್ಮೆ ನನ್ನ ನೋವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕಾಗಿದೆ. ಇದರ ವಿರುದ್ಧ ದೇಶದಲ್ಲಿ ಆಕ್ರೋಶವಿದೆ. ನಾನು ಈ ಆಕ್ರೋಶವನ್ನು ಅನುಭವಿಸಬಲ್ಲೆ. ದೇಶ, ಸಮಾಜ, ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.
ಇದೇ ವೇಳೆ ಮಾಧ್ಯಮಗಳ ವಿರುದ್ಧವು ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಮಾನುಷ ಕೃತ್ಯ ಎಸಗಿದ ವ್ಯಕ್ತಿಗೆ ಶಿಕ್ಷಿಸಿದಾಗ, ಅದು ಸುದ್ದಿಯಲ್ಲಿ ಕಾಣುವುದಿಲ್ಲ. ಯಾವುದೋ ಮೂಲೆಗೆ ಸೀಮಿತಗೊಳಿಸಲಾಗುತ್ತದೆ ಎಂದು ಅವರು ಬೇಸರ ಹೊರಹಾಕಿದ್ದಾರೆ.
ಶಿಕ್ಷೆಗೆ ಗುರಿಯಾದವರ ಬಗ್ಗೆ ವ್ಯಾಪಕ ಚರ್ಚೆ ನಡೆಯುವುದು ಅಗತ್ಯವಾಗಿದೆ. ಇದರಿಂದಾಗಿ ಈ ಪಾಪವನ್ನು ಮಾಡುವವರು ಇದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ಈ ಭಯವನ್ನು ಹುಟ್ಟುಹಾಕುವುದು ಬಹಳ ಮುಖ್ಯ ಎಂದು ನಾನು ಭಾವಿಸುತ್ತೇನೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇನ್ನೂ ಪಶ್ಚಿಮ ಬಂಗಾಳದಲ್ಲಿ (West Bengal) ವೈದ್ಯೆಯ ಹತ್ಯೆ ವಿರೋಧಿಸಿ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನಾಕಾರರು ಸರ್ಕಾರಿ ವೈದ್ಯಕೀಯ ಕಾಲೇಜಿನ ಆವರಣಕ್ಕೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿದ್ದಾರೆ.