ಪಿಇಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಎಂ.ಆರ್.ದೊರೆಸ್ವಾಮಿ ನಿಧನ

Public TV
1 Min Read
M.R Doreswamy

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ (PES University) ಸಂಸ್ಥಾಪಕ ಹಾಗೂ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ (M.R Doreswamy) ಗುರುವಾರ ಸಂಜೆ ನಿಧನರಾಗಿದ್ದಾರೆ.

ಐದು ದಶಕಗಳ ಹಿಂದೆ ಬೆಂಗಳೂರಿನ ಗವಿಪುರ ಗುಟ್ಟಹಳ್ಳಿಯಲ್ಲಿ ತಾತ್ಕಾಲಿಕ ಕಟ್ಟಡವೊಂದರಲ್ಲಿ ಕೇವಲ 45 ವಿದ್ಯಾರ್ಥಿಗಳೊಂದಿಗೆ ಪಿಯು ಕಾಲೇಜು ಆರಂಭಿಸಿದ ದೂರದೃಷ್ಟಿಯ ದೊರೆಸ್ವಾಮಿಯವರು ಪೀಪಲ್ಸ್ ಎಜುಕೇಷನ್ ಸೊಸೈಟಿ (ಪಿಇಎಸ್) ಎಂಬ ಬ್ರ್ಯಾಂಡ್ ಕಟ್ಟಿ, ಇಂಜಿನಿಯರಿಂಗ್, ಮೆಡಿಕಲ್, ಹೊಸ ವಿಶ್ವವಿದ್ಯಾಲಯ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಮೂಲತಃ ಆಂಧ್ರಪ್ರದೇಶದ ಚಿತ್ತೂರಿನ ಕೃಷಿ ಕುಟುಂಬದಲ್ಲಿ 1937ರಲ್ಲಿ ಮೇದರಪಟ್ಲ ರಾಮನಾಯ್ಡು ದೊರೆಸ್ವಾಮಿ ಜನಿಸಿದ್ದರು. ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪಡೆದು, ಇಲ್ಲಿಯೇ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ್ದರು. ನಂತರ ಖಾಸಗಿ ಕಾಲೇಜು ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ, ಅಲ್ಲಿಂದ ಹೊರಬಂದು ಪಿಇಎಸ್ ಶಿಕ್ಷಣ ಸಂಸ್ಥೆ ಆರಂಭಿಸಿದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 2013ರಲ್ಲಿ ದೊರೆಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾದರು. ನಂತರ ರಾಜ್ಯ ಸರ್ಕಾರದಲ್ಲಿ ಉನ್ನತ ಶಿಕ್ಷಣಗಳ ಸುಧಾರಣಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

Share This Article