– ವೆಂಟಿಲೇಟರ್‌ನಲ್ಲಿದ್ದ ರೋಗಿಗೆ ಪ್ಲಾಸ್ಮಾ ಥೆರಪಿ
– ಮೂರು ವಾರದ ಹಿಂದೆ ಗುಣಮುಖರಾದ ಮಹಿಳೆಯಿಂದ ಪ್ಲಾಸ್ಮಾ ದಾನ
ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಒಂದು ಶುಭ ಸುದ್ದಿಯೊಂದು ಲಭ್ಯವಾಗಿದ್ದು, ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಭಾರತದಲ್ಲಿಯೇ ಮೊದಲ ಪ್ರಕರಣವಾಗಿದೆ.
Advertisement
ದೆಹಲಿಯ 49 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಏಪ್ರಿಲ್ 4ರಂದು ದೃಢಪಟ್ಟಿತ್ತು. ರೋಗಿ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ಉಸಿರಾಡಲು ಸಹಾಯವಾಗಲಿ ಎಂದು ವೆಂಟಿಲೇಟರ್ ಅಳವಡಿಸಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
Advertisement
ಏಪ್ರಿಲ್ 8ರಂದು ರೋಗಿಯ ಆರೋಗ್ಯ ತೀರ ಹದಗೆಟ್ಟಾಗ ಕುಟುಂಬಸ್ಥರು ರೋಗಿಗೆ ಪ್ಲಾಸ್ಮಾ ಥೆರಪಿ ನೀಡಿ ಜೀವ ಉಳಿಸಿ ಎಂದು ವೈದ್ಯರಲ್ಲಿ ಮನವಿ ಮಾಡಿಕೊಂಡರು. ಅಲ್ಲದೇ ಕುಟುಂಬಸ್ಥರೇ ಪ್ಲಾಸ್ಮಾ ಡೋನರ್ ಅನ್ನು ಕೂಡ ಹುಡಿಕಿದ್ದರು. ಮೂರು ವಾರದ ಹಿಂದೆಯಷ್ಟೇ ಕೊರೊನಾದಿಂದ ಗುಣಮುಖರಾದ ಮಹಿಳೆಯೊಬ್ಬರನ್ನು ಪತ್ತೆ ಮಾಡಿ, ಪ್ಲಾಸ್ಮಾ ಡೊನೇಟ್ ಮಾಡುವಂತೆ ಮನವಿ ಮಾಡಿಕೊಂಡರು. ಅವರ ಮನವಿಗೆ ದಾನಿ ಕೂಡ ಒಪ್ಪಿ ರೋಗಿಗೆ ಪ್ಲಾಸ್ಮಾ ದಾನ ಮಾಡಿದ್ದರು. ಏಪ್ರಿಲ್ 14ರ ರಾತ್ರಿ ಎಲ್ಲಾ ಸರ್ಕಾರಿ ಹಾಗೂ ವೈದ್ಯಕಿಯ ನಿಯಮದ ಪ್ರಕಾರ ರೋಗಿಗೆ ಪ್ಲಾಸ್ಮಾ ಥೆರಪಿ ನೀಡಲಾಗಿತ್ತು.
Advertisement
Advertisement
ಥೆರಪಿ ನೀಡಿದ ನಾಲ್ಕೇ ದಿನಕ್ಕೆ ಎಂದರೆ ಏಪ್ರಿಲ್ 18ರಂದು ರೋಗಿ ವೆಂಟಿಲೇಟರ್ ಸಹಾಯವಿಲ್ಲದೇ ಉಸಿರಾಡಲು ಆರಂಭಿಸಿ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಾ ಬಂದಿದ್ದರು. ಆ ಬಳಿಕ ಅವರನ್ನು ಸಾಮಾನ್ಯ ವಾರ್ಡಿಗೆ ಶಿಫ್ಟ್ ಮಾಡಲಾಯ್ತು. ನಂತರ ಸೋಮವಾರ 24 ಗಂಟೆಗಳಲ್ಲಿ ಎರಡು ಭಾರಿ ರೋಗಿಯ ಕೋವಿಡ್-19 ಪರೀಕ್ಷೆ ಮಾಡಲಾಯ್ತು. ಎರಡು ಬಾರಿಯೂ ವರದಿ ನೆಗೆಟಿವ್ ಮಂದಿತ್ತು. ಕೆಲ ದಿನಗಳು ಚಿಕಿತ್ಸೆ ನೀಡಿ, ನಿಗಾ ವಹಿಸಿದ ಬಳಿಕ ಇಂದು ಕೂಡ ರೋಗಿಯ ವರದಿ ಕೊರೊನಾ ನೆಗೆಟಿವ್ ಬಂದ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಆದರೆ ಸರ್ಕಾರಿ ನಿಯಮದ ಪ್ರಕಾರ ಡಿಸ್ಚಾರ್ಜ್ ಆದ ವ್ಯಕ್ತಿ ಎರಡು ವಾರಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿ ಇರಬೇಕು. ಹೀಗಾಗಿ ಗುಣಮುಖರಾದ ವ್ಯಕ್ತಿಗೆ ಕ್ವಾರಂಟೈನ್‍ನಲ್ಲಿರಲು ಸೂಚಿಸಲಾಗಿದೆ. ಡಾ. ಓಂಮೆಂದರ್ ಸಿಂಗ್ ನೇತೃತ್ವದ ವೈದ್ಯರ ತಂಡ ರೋಗಿಗೆ ಚಿಕಿತ್ಸೆ ನೀಡಿ, ರೋಗಿಯನ್ನು ಗುಣಮುಖಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ಲಾಸ್ಮಾ ಥೆರಪಿ ಎಂದರೇನು?
ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.
ಸೋಂಕ ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.