ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿ-2025 (Champions Trophy 2025) ಟೂರ್ನಿ ಹಾಗೂ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಅಜಿತ್ ಅಗರ್ಕರ್ (Ajit Agarkar) ನೇತೃತ್ವದ ಆಯ್ಕೆ ಸಮಿತಿ ಟೀಂ ಇಂಡಿಯಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ರೋಹಿತ್ ಶರ್ಮಾ (Rohit Sharma) ಅವರಿಗೆ ನಾಯಕತ್ವದ ಹೊಣೆ ನೀಡಿದ್ದು, ಉಪನಾಯಕನಾಗಿ ಶುಭಮನ್ ಗಿಲ್ ಆಯ್ಕೆ ಅಚ್ಚರಿ ಮೂಡಿಸಿದೆ.
ALL THE BEST, TEAM INDIA. ???????? pic.twitter.com/7wf6YUhb8r
— Mufaddal Vohra (@mufaddal_vohra) January 18, 2025
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಬಳಿಕ ಕೆ.ಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ (Virat Kohli) ಅವರನ್ನು ತಂಡದಿಂದ ಕೈಬಿಡಬಹುದು ಎಂದೇ ಹೇಳಲಾಗಿತ್ತು. ಆದ್ರೆ ಚಾಂಪಿಯನ್ಸ್ ಟ್ರೋಫಿ ಹಾಗೂ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಇಬ್ಬರಿಗೂ ಸ್ಥಾನ ನೀಡಲಾಗಿದೆ.
ಇನ್ನೂ 2023ರ ಏಕದಿನ ವಿಶ್ವಕಪ್ ಬಳಿಕ ಎಡ ಪಾದದ ಗಾಯದ ಸಮಸ್ಯೆಯಿಂದ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೊಹಮ್ಮದ್ ಶಮಿ 15 ತಿಂಗಳ ಬಳಿಕ ಟೀಂ ಇಂಡಿಯಾಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಸದ್ಯ ಶಮಿ ರಣಜಿ ಟ್ರೋಫಿಯಲ್ಲೂ ಫಾರ್ಮ್‌ನಲ್ಲಿದ್ದಾರೆ.
ಬುಮ್ರಾ ಆಡೋದು ಡೌಟ್:
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಕೊನೇ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಮೈದಾನ ತೊರೆದಿದ್ದ ಜಸ್ಪ್ರೀತ್ ಬುಮ್ರಾ ಅವರು ಚಾಂಪಿಯನ್ಸ್ ಟ್ರೋಫಿಗೆ ಕಂಬ್ಯಾಕ್ ಮಾಡಿದ್ದಾರೆ. ಆದ್ರೆ ಬುಮ್ರಾ ಆಟದ ಬಗ್ಗೆ ಇನ್ನೂ ಖಚಿತತೆಯಿಲ್ಲ. ಹಾಗಾಗಿ ಬುಮ್ರಾ ಅವರ ಸ್ಥಾನ ತುಂಬಲು ಅರ್ಷ್‌ದೀಪ್ ಸಿಂಗ್ ಅವರನ್ನ ಆಯ್ಕೆ ಮಾಡಿದ್ದೇವೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ & ಇಂಗ್ಲೆಂಡ್ ಏಕದಿನ ಸರಣಿಗೆ ಟೀಂ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ.
ಫೆ.19ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭ:
ಈ ಬಾರಿ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿರುವ ಎಲೈಟ್ ಪಂದ್ಯಾವಳಿಯು ಫೆಬ್ರವರಿ 19 ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಭಾರತವು ಫೆಬ್ರವರಿ 20 ರಂದು ಬಾಂಗ್ಲಾದೇಶ ತಂಡದ ವಿರುದ್ಧ ಚಾಂಪಿಯನ್ಸ್ ಟ್ರೋಫಿಯ ಅಭಿಯಾನ ಆರಂಭಿಸಲಿದೆ. ಭಾರತ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ಎಂಟು ಸ್ಪರ್ಧಾತ್ಮಕ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ಬಾಂಗ್ಲಾದೇಶ ತಂಡಗಳಿವೆ. ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್ ಸೇರಿವೆ. ಭಾರತವು ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ.