ನವದೆಹಲಿ: ಐಎನ್‍ಎಕ್ಸ್ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಗೃಹ ಸಚಿವ ಚಿದಂಬರಂ ಅವರನ್ನು ಸಿಬಿಐ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ.
ಸೆ.19ರವರೆಗೆ ಚಿದಂಬರಂ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ 74 ವರ್ಷದ ಚಿದಂಬರಂ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ.
ಚಿದಂಬರಂ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಜಾರಿ ನಿರ್ದೇಶನಾಲಯ ಚಿದಂಬರಂ ವಿರುದ್ಧ ಪ್ರಕರಣ ದಾಖಲಿಸಿದೆ. ಹೀಗಾಗಿ ಜಾರಿ ನಿರ್ದೇಶನಾಲಯ ನನ್ನ ಕಕ್ಷಿದಾರರನ್ನು ವಶಕ್ಕೆ ಪಡೆಯಲಿ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಡಿ ಎಂದು ಮನವಿ ಮಾಡಿದರು.
ಸಿಬಿಐ ಪರ ವಾದ ಮಂಡಿಸಿದ ವಕೀಲರು ಆರೋಪಿ ಪ್ರಭಾವಿಯಾಗಿದ್ದಾರೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಮನವಿ ಮಾಡಿದರು.
ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ.ಚಿದಂಬರಂ ಸಲ್ಲಿಸಿದ್ದ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿತ್ತು.
ಚಿದಂಬರಂ ಅವರನ್ನು ಸಿಬಿಐ ಈಗಾಗಲೇ ಬಂಧಿಸಿದ್ದು, ಈಗ ಜಾರಿ ನಿರ್ದೇಶನಾಲಯ(ಇಡಿ) ಸಹ ಚಿದಂಬರಂ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಮುಂದಾಗುತ್ತಿದೆ. ಈ ಸಂಬಂಧ ಚಿದಂಬರಂ ಅವರು ಸುಪ್ರೀಂನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ಭಾನುಮತಿ ಮತ್ತು ನ್ಯಾ. ಎ.ಎಸ್.ಬೋಪಣ್ಣ ಅವರಿದ್ದ ದ್ವಿಸದಸ್ಯ ಪೀಠ ಆಗಸ್ಟ್ 29 ರಂದು ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು.
ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಪ್ರಾಥಮಿಕ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡುವುದು ಸರಿಯಲ್ಲ. ತನಿಖೆ ನಡೆಸುತ್ತಿರುವ ಇಡಿ ನ್ಯಾಯಾಲಯದಲ್ಲಿ ತನಿಖಾ ಮಾಹಿತಿಯನ್ನು ಹಂಚಿಕೊಳ್ಳುವ ಅಗತ್ಯವಿಲ್ಲ. ಆರ್ಥಿಕ ಅಪರಾಧಗಳು ವಿವಿಧ ಆಯಾಮಗಳಲ್ಲಿ ತನಿಖೆಯಾಗಬೇಕು ಎಂದು ಪೀಠ ಅಭಿಪ್ರಾಯಪಟ್ಟಿತು.
ಕೋರ್ಟ್ ಮುಚ್ಚಿದ ಲಕೋಟೆಯಲ್ಲಿ ಈ ಪ್ರಕರಣಕ್ಕೆ ಸಂಬಂಧ ದಾಖಲೆಗಳನ್ನು ಸಲ್ಲಿಸಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತು. ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆ ಚಿದಂಬಂರಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಐಎನ್‍ಎಕ್ಸ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟಿನಲ್ಲಿ ಹೂಡಲಾಗಿರುವ ಎಲ್ಲ ಅರ್ಜಿಗಳನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ತಿಳಿಸಿದರು.