ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದ್ರೀಗ ಅದೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಮ್ಯಾಚ್‌ಗಳು ನಡೆಯುವ ಬಗ್ಗೆ ಚರ್ಚೆ ಶುರುವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕೆ ಅನುಮತಿ ನೀಡೋ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತೆ ಮುನ್ಸೂಚನೆ ನೀಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯಲ್ಲಿ ದ್ವಂದ್ವ ಉಂಟಾಗಿದ್ದು ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ಕೊಡ್ತಿದ್ದಾರೆ.
ಹೌದು. ಕಳೆದ ಜುಲೈನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು, ಇದೇ ಕಾರಣದಿಂದ ಮಹಿಳಾ ವಿಶ್ವಕಪ್ ಪಂದ್ಯ ಕೂಡ ಕೈತಪ್ಪಿತ್ತು. ಇದೀಗ 5 ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮತ್ತೆ ಮ್ಯಾಚ್‌ಗಳು ಪುನರ್ ಆರಂಭಿಸೋ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ನಿನ್ನೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕೂಡ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾಗಿ ಮನವಿ ಪತ್ರ ಕೂಡ ಸಲ್ಲಿಸಿದ್ದರು. ಈ ಬೆನ್ನಲ್ಲೇ ಇವತ್ತು ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ಕೊಡೋ ಬಗ್ಗೆ ಚರ್ಚೆ ಆಗಲಿದೆ.
ಇದು ಆತ್ಮಗೌರವದ ಪ್ರಶ್ನೆ ಎಂದ ಡಿಕೆ
ಮುಂದಿನ ಮಾರ್ಚ್-ಏಪ್ರಿಲ್‌ನಲ್ಲಿ ಐಪಿಎಲ್ ಪಂದ್ಯಾವಳಿಗಳು ಆರಂಭಗೊಳ್ಳಲಿದ್ದು, ಪಂದ್ಯಕ್ಕೆ ಅನುಮತಿ ನೀಡೋ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮುನ್ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳು ನಡೆಯಬಾರದಿತ್ತು. ಆದ್ರೆ ನಡೆದುಹೋಗಿದೆ. ರಾಜ್ಯದ ಗೌರವವನ್ನ ಹಾಳು ಮಾಡಬಾರದು ಅನ್ನೋದು ನನ್ನ ಆಸೆ. ಇದು ಆತ್ಮಗೌರವದ ಪ್ರಶ್ನೆ ಆಗಿದೆ ಎಂದಿದ್ದಾರೆ. ಈ ಮೂಲಕ ಸ್ಟೇಡಿಯಂನಲ್ಲಿ ಕ್ರಿಕೆಟ್ ಮ್ಯಾಚ್‌ಗೆ ಅನುಮತಿ ನೀಡೋ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಇನ್ನೊಂದೆಡೆ, ಕಾಂಗ್ರೆಸ್ ನಾಯಕರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಲ್ಲಿ ದ್ವಂದ್ವ
ಇನ್ನು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಮ್ಯಾಚ್‌ಗೆ ಅನುಮತಿ ನೀಡೋ ವಿಚಾರದಲ್ಲಿ ಬಿಜೆಪಿಯಲ್ಲಿ ದ್ವಂದ್ವ ಉಂಟಾಗಿದೆ. ಕಾಂಗ್ರೆಸ್ ತಪ್ಪಿನಿಂದಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ರಾಬ್ಲಂ ಆಗಿದ್ದು, ಮತ್ತೆ ಅನುಮತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇನ್ನೊಂದೆಡೆ, ಸ್ಟೇಡಿಯಂ ಬಳಿ 11 ಆತ್ಮಗಳು ಓಡಾಡುತ್ತಿದ್ದು, ಯಾವುದೇ ಕಾರಣಕ್ಕೂ ಕ್ರಿಕೆಟ್ ಆಡಿಸಬಾರದು ಅಂತ ಶಾಸಕ ಎಸ್.ಆರ್ ವಿಶ್ವನಾಥ್ ಒತ್ತಾಯಿಸಿದ್ದಾರೆ. ಸ್ಟೇಡಿಯಂ ಕೇಂದ್ರ ಸ್ಥಾನದಲ್ಲಿದ್ದು, ಟ್ರಾಫಿಕ್ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳೂ ಆಗಲಿದೆ ಎಂದಿದ್ದಾರೆ.




