ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

Public TV
2 Min Read
cm

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳ ಕಡೆ ಬೆರಳು ತೋರಿಸುತ್ತಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿಯೇ ಪೆಟ್ರೋಲ್, ಡೀಸೆಲ್ ದರ ಅತೀ ಕಡಿಮೆ ಇದೆ. ರಾಜ್ಯ ಸರ್ಕಾರವು ಈಗಾಗಲೇ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಬ್ಯಾರಲ್‍ಗೆ 130 ಡಾಲರ್ ಇದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿತ್ತು? ಈಗ ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 42 ಡಾಲರ್ ಇದೆ ಎಂಬುವುದನ್ನು ಕೇಂದ್ರ ಗಮನಿಸಬೇಕು ಎಂದಿದ್ದಾರೆ. ಈ ಕುರಿತು ಸಿಎಂ ಕಚೇರಿಯಿಂದ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆಗೊಳಿಸಲಾಗಿದೆ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಬರೆಯಲಾಗಿದ್ದ ಪತ್ರಕ್ಕೆ ಸಿದ್ದರಾಮಯ್ಯ ಉತ್ತರವನ್ನು ನೀಡಿದ್ದು, ಪರೋಕ್ಷವಾಗಿ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ರಾಜ್ಯ ಸರ್ಕಾರವು ಕಡಿತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಮಂಗಳವಾರ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತ ಗೊಳಿಸಿತ್ತು. ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಂಡಳಿ(ಸಿಬಿಇಸಿ)ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿತ್ತು. ಇದಾದ ಬಳಿಕ ಬಿಜೆಪಿ ಸರ್ಕಾರಗಳು ವ್ಯಾಟ್ ಇಳಿಸಲು ಚಿಂತನೆ ನಡೆಸಿದ್ದು, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ವ್ಯಾಟ್ ಇಳಿಸಲಾಗುವುದು ಎಂದು ಗುರುವಾರ ಪ್ರತಿಕ್ರಿಯಿಸಿದ್ದರು. ಮುಂದಿನ ದಿನಗಳಲ್ಲಿ ಬಿಜೆಪಿ ಆಡಳಿತ ಇರುವ ಉತ್ತರಪ್ರದೇಶ, ಗೋವಾ, ರಾಜಸ್ಥಾನ, ಮಹಾರಾಷ್ಟ್ರಗಳಲ್ಲೂ ವ್ಯಾಟ್ ಇಳಿಕೆಯಾಗುವ ಸಾಧ್ಯತೆಯಿದೆ.

ಯಾವ ರಾಜ್ಯದಲ್ಲಿ ವ್ಯಾಟ್ ಎಷ್ಟಿದೆ?
ಕರ್ನಾಟಕ: ಪೆಟ್ರೋಲ್ – ಶೇ.30, ಡೀಸೆಲ್ – ಶೇ.19
ಮಹಾರಾಷ್ಟ್ರ: ಪೆಟ್ರೋಲ್ – ಶೇ.47.64, ಡೀಸೆಲ್ – ಶೇ.28.39
ಆಂಧ್ರ ಪ್ರದೇಶ: ಪೆಟ್ರೋಲ್ – ಶೇ. 38.83, ಡೀಸೆಲ್ – ಶೇ. 30.82
ಮಧ್ಯಪ್ರದೇಶ: ಪೆಟ್ರೋಲ್ – ಶೇ. 38.79, ಡೀಸೆಲ್ – ಶೇ. 30.22
ತೆಲಂಗಾಣ: ಪೆಟ್ರೋಲ್ – ಶೇ. 35.20, ಡೀಸೆಲ್ – ಶೇ.27.00
ಕೇರಳ: ಪೆಟ್ರೋಲ್ – ಶೇ. 34.06

ಪೆಟ್ರೋಲ್ ಹಾಗೂ ಡೀಸೆಲ್ ಮೂಲಕ ಆದಾಯ ಸಂಗ್ರಹ ಮಾಡುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ದೇಶದಲ್ಲೇ ಐದನೇ ಸ್ಥಾನವಿದೆ. ದೇಶದಲ್ಲೇ ಅತಿ ಹೆಚ್ಚು ತೆರಿಗೆ ವಿಧಿಸೋ ಮಹಾರಾಷ್ಟ್ರ ಸರ್ಕಾರ ಆದಾಯ ಸಂಗ್ರಹದಲ್ಲಿ ಮೊದಲ ಸ್ಥಾನವಿದೆ. ಸೇವಾ ತೆರಿಗೆ, ಪ್ರವೇಶ ತೆರಿಗೆಗಳ ಮೂಲಕ ರಾಜ್ಯಗಳು ಸಂಗ್ರಹ ಮಾಡುವ ಹಣ ಈ ಕೆಳಗಿನಂತಿದೆ.

ತೆರಿಗೆ ಸಂಗ್ರಹದಲ್ಲಿ ಯಾರು ಮೊದಲು:
ನಂ.1 ಮಹಾರಾಷ್ಟ್ರ: 23,160 ಕೋಟಿ ರೂ.
ನಂ.2 ಗುಜರಾತ್: 15,958 ಕೋಟಿ ರೂ.
ನಂ.3 ಉತ್ತರಪ್ರದೇಶ: 15, 850 ಕೋಟಿ ರೂ.
ನಂ.4 ತಮಿಳುನಾಡು: 12, 563 ಕೋಟಿ ರೂ.
ನಂ.5 ಕರ್ನಾಟಕ: 11,103 ಕೋಟಿ ರೂ.

ಯಾರಿಗೆ ಎಷ್ಟು?
ಪೆಟ್ರೋಲ್ ಮೇಲೆ ಅಬಕಾರಿ ಸುಂಕ: 21.48 ಪೈಸೆ (ಲೀಟರ್‍ಗೆ)
ಪೆಟ್ರೋಲ್ ಮೇಲೆ ವ್ಯಾಟ್: ಶೇ.27
ಡೀಲರ್ಸ್‍ಗಳ ಕಮಿಷನ್: 3.23 (ಲೀಟರ್‍ಗೆ)

ಡೀಸೆಲ್ ಮೇಲೆ ಅಬಕಾರಿ ಸುಂಕ: 17.33 (ಲೀಟರ್‍ಗೆ)
ಡೀಸೆಲ್ ಮೇಲಿನ ವ್ಯಾಟ್: ಶೇ.27
ಡೀಲರ್ಸ್‍ಗಳ ಕಮಿಷನ್: 2.17 (ಲೀಟರ್‍ಗೆ)

Share This Article
Leave a Comment

Leave a Reply

Your email address will not be published. Required fields are marked *