Connect with us

Corona

ಕೊರೊನಾಗೆ ಜಮ್ಮು-ಕಾಶ್ಮೀರದಲ್ಲಿ ಮೊದಲ ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ

Published

on

ಶ್ರೀನಗರ: ಮಹಾಮಾರಿ ಕೊರೊನಾ ವೈರಸ್‍ಗೆ ಜಮ್ಮು-ಕಾಶ್ಮೀರದಲ್ಲಿ ಮೊದಲ ಬಲಿಯಾಗಿದೆ. ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಸಿಂಗಪುರ್‌ನ ಹೈದರ್‌ಪೊರಾದಿಂದ ಬಂದಿದ್ದ 65 ವರ್ಷದ ಕೊರೊನಾ ಸೋಂಕಿತ ವೃದ್ಧ ಇಂದು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಅವರ ಜೊತೆಗೆ ಸಂಪರ್ಕ ಹೊಂದಿದ್ದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ತಮಿಳುನಾಡಿ ರಾಜ್ಯದ ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಸೋಂಕಿತ ರೋಗಿ ಬುಧವಾರ ನಿಧನರಾಗಿದ್ದರು. ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ತಮಿಳುನಾಡಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಡಾ. ಸಿ.ವಿಜಯಬಾಸ್ಕರ್, ಮೃತ ವ್ಯಕ್ತಿಯು ಶ್ವಾಸಕೋಶ ಸಂಬಂಧಿ ಕಾಯಿಲೆ, ಅಧಿಕ ರಕ್ತದೊತ್ತಡ, ಮಧುಮೇಹದಿಂದಾಗಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಏಪ್ರಿಲ್ 14ರವರೆಗೂ ಲಾಕ್‍ಡೌನ್ ಘೋಷಿಸಿದ್ದಾರೆ. ಆದರೆ ಕೆಲವರು ಲಾಕ್‍ಡೌನ್ ಉಲ್ಲಂಘಿಸಿ ಉದ್ಧಟತನ ಮೆರೆಯುತ್ತಿದ್ದಾರೆ. ಹೀಗಾಗಿ ಕೊರೊನಾ ದೇಶದಲ್ಲಿ ಮತ್ತಷ್ಟು ಆತಂಕ ಹೆಚ್ಚಿಸುತ್ತಿದೆ. ಭಾರತ ಲಾಕ್‍ಡೌನ್ ಮೊದಲ ದಿನವೇ 70 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಗುರುವಾರ ಬೆಳಗ್ಗೆ 9:30 ಗಂಟೆಯ ಮಾಹಿತಿ ಪ್ರಕಾರ ದೇಶದಲ್ಲಿ 664 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಅವರಲ್ಲಿ 12 ಜನರ ಮೃತಪಟ್ಟಿದ್ದಾರೆ. ಉಳಿದಂತೆ 609 ಜನ ಜನ ಚಿಕಿತ್ಸೆ ಪಡೆಯುತ್ತಿದ್ದು, 43 ಮಂದಿ ಗುಣಮುಖರಾಗಿದ್ದಾರೆ.