Connect with us

Belgaum

ಗೋಕಾಕ್ ರಾಜಕೀಯಕ್ಕೆ ಎಚ್‍ಡಿಕೆ ಎಂಟ್ರಿ- ಅಶೋಕ್ ಪೂಜಾರಿಗೆ ನೇರ ಬೆಂಬಲಕ್ಕೆ ಪ್ಲ್ಯಾನ್

Published

on

ಬೆಳಗಾವಿ: ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ನಡೆಯುತ್ತಿವೆ. ಮೈತ್ರಿ ಸರ್ಕಾರ ಪತನಗೊಳಿಸಿದ ಸೇಡನ್ನು ತೀರಿಸಿಕೊಳ್ಳಲು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಗೋಕಾಕ್ ಉಪ ಚುನಾವಣೆಗೆ ಎಂಟ್ರಿ ಕೊಟ್ಟಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಷ್ಟೊಂದು ಪ್ರಭಲವಾಗಿಲ್ಲ. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಅಸಮಾಧಾನಿತರಿಗೆ ಬಲೆ ಬೀಸಿದೆ. ಬಿಜೆಪಿಯು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಗೋಕಾಕ್ ಕ್ಷೇತ್ರದ ಟಿಕೆಟ್ ನೀಡಿದೆ. ಇದರಿಂದಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಅವರು ಅಸಮಾಧಾನ ಹೊರ ಹಾಕಿದ್ದು, ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದಾರೆ.

ಈ ನಡುವೆ ಅಶೋಕ್ ಪೂಜಾರಿ ಅವರನ್ನು ಪಕ್ಷಕ್ಕೆ ಸೆಳೆಯಲು ಜೆಡಿಎಸ್ ಪ್ರಯತ್ನ ನಡೆಸುತ್ತಿದೆ. ಒಂದು ವೇಳೆ ಅಶೋಕ್ ಪೂಜಾರಿ ಪಕ್ಷಕ್ಕೆ ಸೇರದೆ ಸ್ವತಂತ್ರವಾಗಿ ಸ್ಪರ್ಧೆಗೆ ನಿಲ್ಲಲು ಮುಂದಾದರೂ ನೆರ ಬೆಂಬಲ ನೀಡಲು ಜೆಡಿಎಸ್ ಪ್ಲ್ಯಾನ್ ರೂಪಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

ಗೋಕಾಕ್ ಕ್ಷೇತ್ರ ಉಪಚುನಾವಣೆ ತೀವ್ರ ರಂಗೇರಿದ್ದು, ಸೋಮವಾರ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಡುವೆ ಜೆಡಿಎಸ್ ಅಶೋಕ್ ಪೂಜಾರಿ ಅವರನ್ನು ಚುನಾವಣಾ ಕಣಕ್ಕೆ ಇಳಿಸಬಹುದು. ಹೀಗಾಗಿ ಗೋಕಾಕ್‍ನಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಅವರು ಸಹೋದರ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಜೊತೆ ಸೇರಿ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸೋಮವಾರ ಬೆಳಗ್ಗೆ 9ಕ್ಕೆ ಗೋಕಾಕ್ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತ, ಬಸ್ ನಿಲ್ದಾಣದ ಮಾರ್ಗವಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

ಇತ್ತ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಬೆಳಗ್ಗೆ 10ಕ್ಕೆ ಎನ್‍ಎಸ್‍ಎಫ್ ಅತಿಥಿ ಗೃಹದಿಂದ ಮೆರವಣಿಗೆ ಮೂಲಕ ಕೊಳವಿ ಹಣುಮಂತ ದೇವಸ್ಥಾನ, ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಸಹೋದರ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾಥ್ ನೀಡಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಯಾಗಿ ಅಶೋಕ್ ಪೂಜಾರಿ ಸೋಮವಾರವೇ ಅಖಾಡ್ ಪ್ರವೇಶ ಮಾಡಲಿದ್ದಾರೆ. ಬಿಜೆಪಿ ನಡೆಸಿದ ಸಂಧಾನ ಎಲ್ಲಾ ವಿಫಲಗೊಂಡಿದ್ದು, ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅಶೋಕ್ ಪೂಜಾರಿಗೆ ಸ್ವತಃ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಥ್ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.