Connect with us

Bengaluru City

ಕದ್ದು ಮುಚ್ಚಿ ಮಾರೋದು ಬಿಜೆಪಿಯ ಸಂಸ್ಕೃತಿ: ಹೆಚ್.ಡಿ.ಕುಮಾರಸ್ವಾಮಿ

Published

on

– ಜಿಂದಾಲ್‍ಗೆ 3,667 ಎಕರೆ ಭೂಮಿ ಮಾರಾಟ ಮಾಡಲು ನಿರ್ಧಾರ
– ಬಿಜೆಪಿ ಜಿಂದಾಲ್ ಮುಂದೆ ಮಂಡಿಯೂರಲು ಒಂದು ಕಾರಣವಿದೆ

ಬೆಂಗಳೂರು: ಜಿಂದಾಲ್ ಕಂಪನಿಗೆ ಸರ್ಕಾರ 3,667 ಎಕರೆ ಭೂಮಿ ಮಾರಾಟಕ್ಕೆ ಬಿಎಸ್‍ವೈ ಸರ್ಕಾರಕ್ಕೆ ಮುಂದಾಗಿರುವ ನಡೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಈ ನಿರ್ಧಾರವನ್ನ ವಿರೋಧಿಸಿದ್ದ ಬಿಜೆಪಿ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಕೆ.ಪಾಟೀಲ್ ಅವರ ಮುಂದೆ ಸಾಲು ಸಾಲು ಪ್ರಶ್ನೆಗಳನ್ನಿರಿಸಿದ್ದಾರೆ.

‘ಬಿಎಸ್‍ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್ ಬ್ಯಾಕ್ ಆರೋಪ…’ ಜಿಂದಾಲ್‍ಗೆ 3,677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‍ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‍ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‍ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ?

ಆಗ ಕಾಂಗ್ರೆಸ್ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್ ಸಿಂಗ್ ಜಿಂದಾಲ್‍ಅನ್ನು ‘ಈಸ್ಟ್ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‍ಗೆ ಭೂಮಿ ನೀಡಿದೆ. ಆನಂದ್ ಸಿಂಗ್ ಈಗ ಈಸ್ಟ್ ಇಂಡಿಯಾ ಕಂಪನಿ ಪರವಾಗಿದ್ದಾರಾ?

ಜಿಂದಾಲ್‍ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್.ಕೆ ಪಾಟೀಲ್ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ?

ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ.

ಲೀಸ್ ಕಂ ಸೇಲ್ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ.

ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್ ಕಂ ಸೇಲ್ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ.

Click to comment

Leave a Reply

Your email address will not be published. Required fields are marked *