ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ವಿಧಾನಸಭೆಯಲ್ಲಿ ಶಾಸಕ ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ ಆಗಿರುವ ಕುರಿತು ಸ್ಪೀಕರ್ ರಮೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಅಂದಹಾಗೇ ಶುಕ್ರವಾರ ನಿಗದಿಯಾಗಿದ್ದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ಗುರುವಾರ ನಾಮಪತ್ರ ಸಲ್ಲಿಸಿದರು. ಸದ್ಯ ಸ್ಪೀಕರ್ ಸ್ಥಾನ ಕಾಂಗ್ರೆಸ್ ಗೆ ಲಭಿಸಿದ್ದರೆ, ಉಪಸಭಾಧ್ಯಕ್ಷ ಸ್ಥಾನ ಜೆಡಿಎಸ್ ಗೆ ನೀಡಲಾಗಿದೆ.
ವಿಧಾನಸಭೆಯಲ್ಲಿ ನೂತನ ಉಪಾಸಭಾಧ್ಯಕ್ಷ ಕೃಷ್ಣಾರೆಡ್ಡಿ ಮಾತನಾಡಿ, ಇದು ಸಾಂವಿಧಾನಿಕ ಹುದ್ದೆ. ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಮಾಜಿ ಪ್ರಧಾನಿ ದೇವೇಗೌಡರು, ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್ ಸೇರಿದಂತೆ ಹಲವರು ಆಶೀರ್ವಾದಿಸಿದ್ದಾರೆ. ಇದು ನನ್ನ ಸೌಭಾಗ್ಯ. ಸದನ ಕಾರ್ಯಕಲಾಪವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಜೆಡಿಎಸ್ -ಕಾಂಗ್ರೆಸ್ ಮೈತ್ರಿಕೂಟದಿಂದ ಜೆಕೆ ಕೃಷ್ಣಾರೆಡ್ಡಿ ಸ್ಪರ್ಧಿಸಿದ್ದರೆ ಪ್ರತಿಪಕ್ಷ ಬಿಜೆಪಿಯಿಂದ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾಗಿದ್ದಾರೆ. ವಿಶೇಷವಾಗಿ ವಿಧಾನಸಭಾ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಎರಡೂ ಹುದ್ದೆಗಳು ಅವಿಭಜಿತ ಕೋಲಾರ ಜಿಲ್ಲೆಗೆ ದೊರೆತಿದೆ.
ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳಲ್ಲಿ ಪೈಪೋಟಿ ನಡೆದಿದೆ ಎನ್ನಲಾಗಿದ್ದು, ಆದರೆ ಸದ್ಯ ಶಾಸಕ ಜೆಕೆ ಕೃಷ್ಣಾರೆಡ್ಡಿ ಅವರಿಗೆ ಸ್ಥಾನ ಲಭಿಸಿದೆ. ಸಮ್ಮಿಶ್ರ ಸರ್ಕಾರದ ವೇಳೆ ಶಾಸಕ ಜೆಕೆ ಕೃಷ್ಣಾರೆಡ್ಡಿ ತಾವು ಸಚಿವ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಬಳಿಕ ನಡೆದ ಬೆಳವಣಿಗೆಗಳಲ್ಲಿ ಅವರಿಗೆ ಸಚಿವ ಸ್ಥಾನ ಲಭಿಸಿರಲಿಲ್ಲ.