ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರು ಪಕ್ಷದ ನಾಯಕರ ವಿರುದ್ಧವೇ ಸಿಡಿದೆದ್ದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ದೌಡಾಯಿಸಿದ್ದಾರೆ.
ರೋಷನ್ ಬೇಗ್ ಹೇಳಿಕೆಗೆ ಕೆಸಿ ವೇಣುಗೋಪಾಲ್ ಅವರು ತೀವ್ರ ಕೆಂಡಾಮಂಡಲವಾಗಿದ್ದಾರೆ. ಹೀಗಾಗಿ ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾವೇರಿ ನಿವಾಸಕ್ಕೆ ಸಂಜೆ ಭೇಟಿ ನೀಡಿದರು. ಇತ್ತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ಕೂಡ ಆಗಮಿಸಿದರು. ಈ ಮೂಲಕ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯನವರ ನಿವಾಸದಲ್ಲಿ ಕುಳಿತು ಮುಂದಿನ ರಣ ತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ.
Advertisement
Advertisement
ಮಾಜಿ ಸಚಿವ ಹೇಳಿಕೆ, ಕಾಂಗ್ರೆಸ್ ನಾಯಕರ ಅಸಮಾಧಾನ, ಎಕ್ಸಿಟ್ ಪೋಲ್ ಸೇರಿದಂತೆ ವಿಚಾರ ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಿದ್ದಾರೆ. ಈ ವೇಳೆ ಆಪರೇಷನ್ ಕಮಲದ ಪ್ರಯತ್ನ ಆರಂಭವಾಗಲಿದೆ ಎಂದು ಸಿದ್ದರಾಮಯ್ಯ ಅವರು ಕೆ.ಸಿ.ವೇಣುಗೋಪಾಲ್ ಅವರಿಗೆ ಸೂಚನೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು, ನಾನೊಬ್ಬನೇ ಎಲ್ಲರನ್ನೂ ಸರಿಪಡಿಸುವುದಕ್ಕೆ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಶಾಸಕರ ಅಸಮಾಧಾನ ಸರಿಪಡಿಸುವುದು ಸಿಎಂ ಕುಮಾರಸ್ವಾಮಿ ಅವರ ಕೆಲಸ ಎಂದು ಕಡ್ಡಿ ತುಂಡಾದಂತೆ ಮಾತನಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Advertisement
Advertisement
ಜೆಡಿಎಸ್ ನಾಯಕರು ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಇದರಿಂದಾಗಿ ನಮ್ಮ ಶಾಸಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಸಿಎಂ ವರ್ತನೆಯೂ ನಮ್ಮ ಶಾಸಕರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ, ಅದನ್ನು ಸರಿಪಡಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯನವರ ಮಾತಿನಿಂದ ವಿಚಲಿತರಾದ ಕೆ.ಸಿ.ವೇಣುಗೋಪಾಲ್ ಅವರು ಸಿಎಂ ಕುಮಾರಸ್ವಾಮಿಯವರ ಸಮ್ಮುಖದಲ್ಲೇ ಮಾತುಕತೆ ನಡೆಸಲು ತೀರ್ಮಾನಿಸಿದ್ದಾರೆ. ಈ ನಿಟ್ಟಿನಲ್ಲಿ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಅವರನ್ನ ಸಿಎಂ ಕುಮಾರಸ್ವಾಮಿ ಅವರ ಭೇಟಿಗೆ ಕರೆದೊಯ್ದಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.