ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲಿಸಿ ಹಾಗೂ ಜನರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲು ಇದೇ ತಿಂಗಳು 11 ರಂದು ಕಲಬುರಗಿಯಲ್ಲಿ ಬೃಹತ್ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಮಾಲೀಕಯ್ಯ ಗುತ್ತೇದಾರ್ ಹೇಳಿದರು.
ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುತ್ತೇದಾರ್, ಸಿಎಎ ಹಾಗೂ ಎನ್.ಆರ್.ಸಿ ಬಗ್ಗೆ ಬಹತೇಕ ಜನರಿಗೆ ಗೊತ್ತೇ ಇಲ್ಲ, ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಿ ತಪ್ಪು ದಾರಿಗೆ ಎಳೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅದಕ್ಕಾಗಿ ಜನರಿಗೆ ಸಿಎಎ ಹಾಗೂ ಎನ್.ಆರ್.ಸಿ ಬಗ್ಗೆ ಅರಿವು ಮೂಡಿಸಲು ಜ.11 ರಂದು ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಈ ಜಾಥಾವು ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ನಡೆಯಲಿದೆ ಎಂದರು. ಜಾಥಾದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.