ಬೆಂಗಳೂರು: ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಬಿಡದಿಯ ಈಗಲ್‍ಟನ್ ರೆಸಾರ್ಟಿನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೈದ ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: `ಪಿಸ್ತೂಲ್ ಕೊಡಿ ಈತನನ್ನು ಇಲ್ಲೇ ಮುಗಿಸಿ, ಪ್ರಾಣ ತೆಗೆಯುತ್ತೇನೆ’ – ರೆಸಾರ್ಟ್ ಕಿತ್ತಾಟದ ಇಂಚಿಂಚು ಮಾಹಿತಿ ಕೊಟ್ಟ ಆನಂದ್ ಸಿಂಗ್
ಕೇಸ್ ದಾಖಲಾಗುತ್ತಿದ್ದಂತೆ ಗಣೇಶ್ ನಾಪತ್ತೆಯಾಗಿದ್ದು, ಬಿಡದಿ ಪೊಲೀಸರು ಈಗ ಹುಡುಕಾಟ ನಡೆಸುತ್ತಿದ್ದಾರೆ. ರಾಮನಗರ ಡಿವೈಎಸ್ಪಿ ಪುರುಷೋತ್ತಮ್ ಹಾಗೂ ಬಿಡದಿ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದಲ್ಲಿ ಗಣೇಶ್ ಪತ್ತೆಗೆ ಮೂರು ತಂಡ ರಚನೆಯಾಗಿದೆ. ಇದನ್ನೂ ಓದಿ: ಆನಂದ್ ಸಿಂಗ್ ಮೇಲೆ ಹಲ್ಲೆ- ಕಾಂಗ್ರೆಸ್ಸಿನಿಂದ ಶಾಸಕ ಗಣೇಶ್ ಅಮಾನತು
ಬಂಧನ ಭೀತಿಯಿಂದ ಪಾರಾಗಲು ಕೋರ್ಟ್ ಮೊರೆ ಹೋಗಿ ಜಾಮೀನು ಪಡೆಯಲು ಗಣೇಶ್ ಪ್ರಯತ್ನ ನಡೆಸುತ್ತಿದ್ದಾರೆ. ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಗಣೇಶ್ ಬಂಧನವಾಗುವ ತನಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿರಲು ಆನಂದ್ ಸಿಂಗ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಅವರನ್ನು ಅಮಾನತು ಮಾಡಲಾಗಿದೆ. ಕೆಪಿಸಿಸಿ ಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದಿಂದ ಶಾಸಕ ಗಣೇಶ್ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚನೆ ಮಾಡಲಾಗಿದ್ದು, ಡಿಸಿಎಂ ಪರಮೇಶ್ವರ್, ಕೆ.ಜೆ ಜಾರ್ಜ್, ಕೃಷ್ಣಭೈರೇಗೌಡ ಅವರನ್ನೊಳಗೊಂಡ ಸಮಿತಿ ಆದಷ್ಟು ಶೀಘ್ರದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.
ಆನಂದ್ ಸಿಂಗ್ ಅವರ ಜೊತೆ ಮಾತನಾಡಿ ಘಟನೆಯ ವಿವರವನ್ನು ಪಡೆಯಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಸಭೆ ನಡೆಸಿ ಅಮಾನತು ನಿರ್ಧಾರವನ್ನು ಕೈಗೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv