ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

Public TV
2 Min Read
Chandrashekhar Patil

ಬೆಂಗಳೂರು: ನಾಡಿನ ಹಿರಿಯ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದ ಪ್ರೊ. ಚಂದ್ರಶೇಖರ್‌ ಪಾಟೀಲ್ ಅವರ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್‌ ಜೋಶಿ ಹೇಳಿಕೆ ಬಿಡುಗಡೆ ಮಾಡಿ ಸಂತಾಪ ಸೂಚಿಸಿದ್ದಾರೆ.

ಹೇಳಿಕೆಯಲ್ಲಿ ಏನಿದೆ?:
ಪ್ರಾಧ್ಯಾಪಕರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚಂದ್ರಶೇಖರ್‌ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾಗಿದ್ದರು. ಅವರು ಸಂಕ್ರಮಣ ಪತ್ರಿಕೆಯ ಸಂಪಾದಕರಾಗಿ, ಅಂಕಣಕಾರರಾಗಿ, ಲೇಖಕರಾಗಿ ಬಂಡಾಯ, ನವೋದಯ ಸಾಹಿತ್ಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ದೆಸೆಯಿಂದಲೂ ಅನೇಕ ಕನ್ನಡಪರ ಚಳವಳಿಗಳಲ್ಲಿ ಭಾಗವಹಿಸುತ್ತಿದ್ದ ಚಂಪಾ ಅವರು ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು.

Chandrashekhar Patil 2

ಗೋಕಾಕ ಚಳವಳಿ ಮುಂತಾದ ಅನೇಕ ಜನಪರ ಚಳವಳಿಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದ ಚಂಪಾ ಅವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲುವಾಸವನ್ನೂ ಸಹ ಅನುಭವಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚಂಪಾ ಅವರು ಪುಸ್ತಕ ಸಂತೆಯನ್ನು ಏರ್ಪಡಿಸಿ ಸಣ್ಣ ಪ್ರಮಾಣದ ಪ್ರಕಾಶಕರನ್ನು ಉತ್ತೇಜಿಸುವ ಕೆಲಸ ಮಾಡಿದ್ದರು. ಗಡಿನಾಡ ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕಾಗಿ ಅಧ್ಯಕ್ಷರ ಪುಸ್ತಕ ನಿಧಿಯನ್ನು ಪ್ರಾರಂಭಿಸಿ ನೆರವಾಗಿದ್ದರು. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

Chandrashekhar Patil 1

ಇವರ ಸಾಹಿತ್ಯ ಕೃಷಿಗೆ, ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಆಳ್ವಾಸ್ ನುಡಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವ ಪುರಸ್ಕಾರಗಳು ಸಂದಿವೆ. ಮೈಸೂರಿನಲ್ಲಿ ಜರುಗಿದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ನೀಡಿ ಪರಿಷತ್ತು ಗೌರವಿಸಿತ್ತು. ಇದನ್ನೂ ಓದಿ: ಇಂದಿನಿಂದ ಬೂಸ್ಟರ್ ಡೋಸ್ – ಯಾರು ಪಡೆಯಬಹುದು? ಅರ್ಹತೆ ಏನು?

MAHESH JOSHI

ಕನ್ನಡ ಕನ್ನಡ ರ‍್ರಿ ನಮ್ಮ ಸಂಗಡ ಎಂದು ಎಲ್ಲರನ್ನೂ ಕನ್ನಡದ ಕಾಯಕದಲ್ಲಿ ಒಳಗೊಳ್ಳುವಂತೆ ಪ್ರೇರೆಪಿಸುತ್ತಿದ್ದ ಪ್ರೊ. ಚಂಪಾ ಅವರ ನಿಧನದಿಂದಾಗಿ ನಾಡಿಗೆ ಅಪಾರ ನಷ್ಟವುಂಟಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಚಂಪಾ ಅವರ ಕುಟುಂಬಕ್ಕೆ, ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *