Connect with us

Bengaluru City

ಕನ್ನಡ ಶಾಲೆಗಳ ಹಿತಕ್ಕಾಗಿ ಕಡ್ಡಾಯ ಭಾಷೆ ಕಲಿಕೆ ಆದೇಶ ಕೈ ಬಿಡಿ: ಆಂಧ್ರ ಸಿಎಂಗೆ ಸುರೇಶ್ ಕುಮಾರ್ ಪತ್ರ

Published

on

ಬೆಂಗಳೂರು : ಆಂಧ್ರ ಪ್ರದೇಶದಲ್ಲಿ ಇಂಗ್ಲಿಷ್, ತೆಲುಗು, ಉರ್ದು ಮಾತ್ರ ಕಡ್ಡಾಯವಾಗಿ ಕಲಿಯಬೇಕು ಅನ್ನೋ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ನಿರ್ಧಾರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರ ಸಿಎಂಗೆ ಪತ್ರ ಬರೆದಿರುವ ಸುರೇಶ್ ಕುಮಾರ್, ತಮ್ಮ ನಿರ್ಧಾರ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಗಡಿಯಲ್ಲಿನ ಕನ್ನಡ ಶಾಲೆಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈ ಬಿಡಬೇಕು ಅಂತ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೆ ಆಂಧ್ರ ಸಿಎಂ ಜಗನ್ ಎಲ್ಲಾ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಕಲಿಸಲಾಗುತ್ತೆ. ಅಲ್ಲದೆ ತೆಲುಗು ಮತ್ತು ಉರ್ದುವನ್ನ ಆಂಧ್ರದಲ್ಲಿ ಕಡ್ಡಾಯವಾಗಿ ಕಲಿಯಬೇಕು ಎಂದು ಆದೇಶ ಹೊರಡಿಸಿದ್ದರು. ಜಗನ್ ಈ ನಿರ್ಧಾರದಿಂದ ಗಡಿಯಲ್ಲಿರೋ ಕನ್ನಡ ಶಾಲೆಗಳ ಮೇಲೆ ಪರಿಣಾಮ ಬೀರುತ್ತೆ. ಕನ್ನಡ ಕಲಿಕೆಯೇ ಕೈಬಿಡೋ ಸಾಧ್ಯತೆಯೂ ಹೆಚ್ಚಾಗಿದೆ. ಹೀಗಾಗಿ ಸಿಎಂ ಜಗನ್ ಗೆ ಪತ್ರ ಬರೆದಿರೋ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.

ಸುರೇಶ್ ಕುಮಾರ್ ಪತ್ರದ ಸಾರಾಂಶ ಹೀಗಿದೆ:
ಕರ್ನಾಟಕ ಮತ್ತು ಆಂಧ್ರಪದೇಶ ರಾಜ್ಯಗಳ ಸಂಬಂಧ ಐತಿಹಾಸಿಕವಾದುದು. ಕೃಷ್ಣದೇವರಾಯನ ಕಾಲಕ್ಕಿಂತಲೂ ಮೊದಲಿನಿಂದಲೂ ಈ ಎರಡೂ ರಾಜ್ಯಗಳು ಯಾವಾಗಲೂ ಸಹೋದರ ಸಂಬಂಧದಲ್ಲೇ ನಡೆದುಕೊಂಡು ಬರುತ್ತಿವೆ. ಭಾಷೆ ಸೇರಿದಂತೆ ಎಲ್ಲ ವಿಷಯಗಳಲ್ಲೂ ನಮ್ಮೆರಡು ರಾಜ್ಯಗಳು ಪರಸ್ಪರ ಸೌಹಾರ್ದದಿಂದಲೇ ಇವೆ. ಇದು ಎರಡೂ ರಾಜ್ಯಗಳಿಗೂ ಅಭಿಮಾನದ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಆಂಧ್ರ ಪ್ರದೇಶ ಸರ್ಕಾರ ಸೀಮಾಂಧ್ರದಲ್ಲಿನ ಎಲ್ಲ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸುವ ಹಾಗೆಯೇ ಪ್ರತಿ ವಿದ್ಯಾರ್ಥಿಯನ್ನು ತೆಲುಗು ಇಲ್ಲವೇ ಉರ್ದು ಭಾಷೆ ಕಲಿಯಬೇಕೆಂಬ ನಿರ್ಧಾರ ಕೈಗೊಂಡಿರುವುದು ನಮ್ಮೆರಡು ರಾಜ್ಯಗಳ ನಡುವಿನ ಸೌಹಾರ್ದಕ್ಕೆ ಧಕ್ಕೆಯಾದಂತಾಗಿದೆ.

ಇದು ಆಂಧ್ರಪ್ರದೇಶದ ಗಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರ ಮನೋಸ್ಥೈರ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸಾಂಸ್ಕೃತಿಕ ಸಂಘರ್ಷ ಇತರೆ ಯಾವುದೇ ಸಾಮಾಜಿಕ ಸಂಘರ್ಷಗಳಿಗಿಂತಲೂ ತೀವ್ರ ನೋವಿನ ಸಂಗತಿಯಾಗಿದೆ. ನಮ್ಮ ರಾಜ್ಯದ ಉದಾರ ಮತ್ತು ಸಮಗ್ರ ಆಡಳಿತ ಕಾರ್ಯ ವಿಧಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹತ್ತಾರು ತೆಲುಗು ಮಾಧ್ಯಮ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಆಂಧ್ರಪ್ರದೇಶ ಕೈಗೊಂಡ ನಿರ್ಧಾರ ಕನ್ನಡ ಭಾಷಾ ಶಿಕ್ಷಕರ ಜೀವನವನ್ನು ಅಪಾಯಕ್ಕೆ ಸಿಕ್ಕಿಸುವುದು ಮಾತ್ರವೇ ಅಲ್ಲ, ಕರ್ನಾಟಕ ಹೊರಗೆ ವಾಸಿಸುತ್ತಾರೆಂಬ ಒಂದೇ ಕಾರಣಕ್ಕಾಗಿ ಕನ್ನಡಿಗರ ಮಕ್ಕಳು ತಮ್ಮ ಮಾತೃಭಾಷೆಯಿಂದ ವಂಚಿತವಾಗಬೇಕಾಗುತ್ತದೆ. ಹಾಗಾಗಿ ಕನ್ನಡವನ್ನು ಭಾಷೆಯಾಗಿ ಇಲ್ಲವೇ ಮಾಧ್ಯಮವಾಗಿ ಕಲಿಸುವ ಅಲ್ಪಸಂಖ್ಯಾತ ಭಾಷಾ ಶಾಲೆಗಳನ್ನು ಮುಂದುವರಿಸುವ ಮೂಲಕ ತಮ್ಮ ರಾಜ್ಯದಲ್ಲಿ ವಾಸಿಸುವ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವ ಸುರೇಶ್ ಕುಮಾರ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Click to comment

Leave a Reply

Your email address will not be published. Required fields are marked *