ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

Public TV
1 Min Read
collage kwr

ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ .

ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು ಯಾವುದೇ ಸಿಹಿಯಾದ ಉಂಡೆಯಾಗಿರದೇ ಪ್ಯಾಕ್ ಮಾಡಿದ ಬೀಜದುಂಡೆಯಾಗಿತ್ತು. ವೀಣಾ ಹಾಗೂ ರಾಮಚಂದ್ರ ವೈದ್ಯ ದಂಪತಿಗಳ ಪುತ್ರನಾದ ಆದಿತ್ಯ (ಜಯಶೀಲ)ನ ಉಪನಯನವನ್ನು ತಾಲೂಕಿನ ಚಂದಗುಳಿ ಗಂಟೆ ಗಣಪತಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಮ್ಮ ಮಗನ ಉಪನಯನ ವಿಭಿನ್ನವಾಗಿರಬೇಕು ಮತ್ತು ಈ ಶುಭಕಾರ್ಯದ ಸವಿನೆನಪು ಚಿರಸ್ಥಾಯಿಯಾಗಿರಬೇಕು ಎನ್ನುವ ಉದ್ದೇಶದಿಂದ ಈ ದಂಪತಿ ಆಯ್ಕೆ ಮಾಡಿಕೊಂಡಿದ್ದು ಪರಿಸರ ಜಾಗೃತಿ. ಮಗನ ಉಪನಯನದ ಹೆಸರಿನಲ್ಲಿ ನೂರಾರು ಗಿಡಗಳು ಅಲ್ಲಲ್ಲಿ ಬೆಳೆದು ನಿಲ್ಲಲಿ, ಈ ಮೂಲಕ ಹಸಿರು ಪರಿಸರ ಹೆಚ್ಚಾಗಲಿ ಎಂಬ ಉದ್ದೇಶದಿಂದ ಬೀಜದುಂಡೆಗಳನ್ನು ತಯಾರಿಸಿ, ಬಂದಂತಹ ಅತಿಥಿಗಳಿಗೆ ಆದಿತ್ಯನ ಆಧ್ಯಾತ್ಮಿಕ ಪಯಣಕ್ಕೆ ಸಾಕ್ಷಿಯಾಗಿ ಹರಸಿ. ಪ್ರೀತಿಯಿಂದ ನಾವು ನೀಡುವ ಜೀವಗಾಳು ಪಸರಿಸಿ ಎಂಬ ಸಂದೇಶದೊಂದಿಗೆ ವಿತರಿಸಿದ್ದಲ್ಲದೇ, ಇದನ್ನು ನಿಮ್ಮ ಮನೆಯ ಸುತ್ತಮುತ್ತಲಿನ ಖಾಲಿ ಪ್ರದೇಶದಲ್ಲಿ ಹಾಕುವುದರ ಮೂಲಕ ಹಸಿರು ಪರಿಸರ ಹೆಚ್ಚಾಗಲು ಕೈಜೋಡಿಸಿ ಎಂಬ ಮನವಿಯನ್ನೂ ಮಾಡಿಕೊಳ್ಳಲಾಯಿತು.

kwr upanayana 1

ಈ ವಿಚಾರದ ಬಗ್ಗೆ ಮಾತನಾಡಿರುವ ಈ ಬೀಜದುಂಡೆ ವಿತರಣೆಯ ರೂವಾರಿ ಆದಿತ್ಯನ ಕುಟುಂಬದವರಾದ ವಾನಳ್ಳಿಯ ನಾಗವೇಣಿ ಹೆಗಡೆ, ಅತಿಥಿಗಳಿಗೆ ವಿತರಿಸಲು ಎರಡು ಜಾತಿಯ ಮರಗಳಾದ ನೇರಳೆ, ಹಲಸು ಮುಂತಾದ ಬೀಜಗಳುಳ್ಳ ಸುಮಾರು 1200 ಹೆಚ್ಚು ಬೀಜದುಂಡೆಗಳನ್ನು ತಯಾರಿಸಿ ವಿತರಿಸಿದ್ದೇವೆ. ಅವುಗಳಲ್ಲಿ ನೂರು ಗಿಡಗಳು ಹುಟ್ಟಿ, ಮರವಾಗಿ ಬೆಳೆದು ನಿಂತರೆ ಪರಿಸರಕ್ಕೊಂದು ಕೊಡುಗೆ ನೀಡಬೇಕೆಂದ ನಮ್ಮ ಅಭಿಲಾಶೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಈ ರೀತಿ ಶುಭ ಕಾರ್ಯಗಳಲ್ಲಿ ಸಾಮಾಜಿಕ ಸಂದೇಶವನ್ನು, ಪರಿಸರ ಜಾಗೃತಿಯನ್ನು ಮೂಡಿಸುವಂತಾದರೆ ಶುಭ ಕಾರ್ಯ ಸಾಮಾಜಿಕ ಕಾರ್ಯವಾಗುವುದರಲ್ಲಿ ಸಂಶಯವಿಲ್ಲ.

Share This Article
Leave a Comment

Leave a Reply

Your email address will not be published. Required fields are marked *