Connect with us

ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಬೇಡಿಕೆಗೆ ಮಣಿದ ಸರ್ಕಾರ

ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಬೇಡಿಕೆಗೆ ಮಣಿದ ಸರ್ಕಾರ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ರಸ್ತೆಗಳಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.

ಬಜೆಟ್‍ನಲ್ಲಿ ಕಾರ್ಯಕರ್ತೆಯರಿಗೆ 1 ಸಾವಿರ ಗೌರವ ಧನ ಹೆಚ್ಚಿಸಿದ್ದ ಸರ್ಕಾರ, ಇದೀಗ ಮತ್ತೆ 1 ಸಾವಿರ ರೂ ಗೌರವ ಧನ ಹೆಚ್ಚಳ ಮಾಡಿದೆ. ಅಂಗನವಾಡಿ ಸಹಾಯಕಿಯರಿಗೆ ಮತ್ತೆ 500 ಗೌರವಧನ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 8000 ಸಾವಿರ ಗೌರವಧನ ಸಿಕ್ಕಿದರೆ, ಸಹಾಯಕಿಯರಿಗೆ 4 ಸಾವಿರ ರೂ. ಸಿಗಲಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ನಿರ್ಧಾರಕ್ಕೆ ಸಂಘಟನೆಗಳು ಒಪ್ಪಿಕೊಂಡಿದೆ. ಹತ್ತು ಸಾವಿರಕ್ಕೆ ಅವ್ರು ಬೇಡಿಕೆ ಇಟ್ಟಿದ್ರು. ಆದ್ರೆ ಅಷ್ಟೊಂದು ಆಗಲ್ಲ ಎಂದು ಸಭೆಯಲ್ಲಿ ಹೇಳಿದ್ದೇವೆ. ಮುಂದಿನ ಬಜೆಟ್ ನಲ್ಲಿ ಮತ್ತೆ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಕೇಳಬಾರದು ಎಂದು ಹೇಳಿದ್ದೇವೆ. ಸರ್ಕಾರದ ತೀರ್ಮಾನವನ್ನ ಅವ್ರು ಸ್ವಾಗತಿಸಿದ್ದಾರೆ ಎಂದರು.

ಇದೇ ವೇಳೆ ಮಾತನಾಡಿದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಸರ್ಕಾರ ಸಕಾರಾತ್ಮಕ ನಿರ್ಧಾರ ಕೈಗೊಂಡಿದೆ. ಅಂಗನವಾಡಿಯಲ್ಲಿ ಎಲ್‍ಕೆಜಿ, ಯುಕೆಜಿ ಪ್ರಾರಂಭದ ಬೇಡಿಕೆಯನ್ನು ಇಟ್ಟಿದ್ವಿ, ಸರ್ವಿಸ್ ರೂಲ್ಸ್ ಗೆ  ಸಮಿತಿ ರಚನೆಗೆ ಒಪ್ಪಿಗೆ ನೀಡಲಾಗಿದೆ. ಹೋರಾಟದಲ್ಲಿ ಶೇ. 50 ರಷ್ಟು ಸಫಲರಾಗಿದ್ದೀವಿ ಎಂದು ತಿಳಿಸಿದರು.

ಕೇಂದ್ರ ಮಾಡಲಿ:
ಸಂಬಳ ಹೆಚ್ಚಳ ಮಾಡಿದ ಬಳಿಕ ಟ್ವಿಟ್ಟರ್‍ನಲ್ಲಿ ರಾಜ್ಯ ಸರ್ಕಾರ ಈ ಬಾರಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರೂ. ಸಹಾಯಕಿಯರಿಗೆ 1 ಸಾವಿರ ರೂ. ಸಂಬಳವನ್ನು ಹೆಚ್ಚಳ ಮಾಡಿದ್ದೇವೆ. ಇದೇ ರೀತಿ ನೀವು ಸಂಬಳವನ್ನು ಏರಿಸಿ ಎಂದು ಪ್ರಧಾನಿ ಮೋದಿ ಅವರಲ್ಲಿ  ಮನವಿ ಮಾಡಿದ್ದಾರೆ.

ಮಾರ್ಚ್ 20ರಂದು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 4 ದಿನಗಳ ಕಾಲ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಕಾರ್ಯಕರ್ತೆಯರ ಜೊತೆ ಮಾತುಕತೆ ನಡೆಸಿದ್ದ ಸರ್ಕಾರ, ಈಗ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಚುನಾವಣೆ ಮುಗಿದ ಬಳಿಕ ಏಪ್ರಿಲ್ 10 ರಂದು ಸಭೆ ನಡೆಸಿ ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿತ್ತು.

ಕಾರ್ಯಕರ್ತೆಯರ ಬೇಡಿಕೆ ಏನಿತ್ತು?
ರಾಜ್ಯದಲ್ಲಿ ಒಟ್ಟು 1.25 ಲಕ್ಷ ಅಂಗನವಾಡಿ ಸಿಬ್ಬಂದಿ ಇದ್ದು, ವೇತನ 7 ಸಾವಿರದಿಂದ 10 ಸಾವಿರ ರೂ. ಹೆಚ್ಚಳ ಮಾಡಬೇಕು. ಸಹಾಯಕಿಯರ ವೇತನ 3,500 ರಿಂದ 7,500 ರೂ. ಹೆಚ್ಚಳ ವಾಗಬೇಕು. ಸಹಾಯಕಿಯರಿಗೆ ಮುಂಬಡ್ತಿ, ಪಿಂಚಣಿ, ಪಿಎಫ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು.

ಯಾರ ಪಾಲು ಎಷ್ಟು?
ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಸಚಿವೆ ಉಮಾಶ್ರೀ ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರತಿಭಟನೆ ಯಾಕೆ?
ಇಲ್ಲಿಯವರೆಗೆ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 6 ಸಾವಿರ ಮತ್ತು ಸಹಾಯಕಿಯರಿಗೆ 3 ಸಾವಿರ ರೂ. ಸಂಬಳ ಸಿಗುತಿತ್ತು. ಈ ವರ್ಷದ ಬಜೆಟ್‍ನಲ್ಲಿ ಸರ್ಕಾರ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಮತ್ತು ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಈ ಹೆಚ್ಚಳ ನಮಗೆ ಸಾಲುವುದಿಲ್ಲ. ಹತ್ತಿರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸರ್ಕಾರಗಳು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಸಹಾಯಕಿಯರಿಗೆ 7,500 ರೂ. ನೀಡುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವೂ ನಮಗೆ ಇಷ್ಟೇ ಸಂಬಳ ನೀಡಬೇಕೆಂದು ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

width=”800″ height=”650″ />

Advertisement
Advertisement