ಉಪಚುನಾವಣೆಗೆ ತಡೆ – ಅತಂತ್ರರಿಗೆ ಬಿಗ್ ರಿಲೀಫ್

Public TV
1 Min Read
rebel congress jds resigns e 1000x582 2

ನವದೆಹಲಿ: ಕರ್ನಾಟಕ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು 15 ಮಂದಿ ಅತಂತ್ರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಇತ್ಯರ್ಥ ಆದ ಮೇಲೆ ಚುನಾವಣೆ ನಡೆಯಲಿ ಎಂದು ಹೇಳಿದ ತ್ರಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದೆ.

ಪ್ರಕರಣದ ತೀರ್ಪು ಬರುವವರೆಗೂ ಚುನಾವಣೆಯನ್ನು ಮುಂದೂಡಬಹುದು ಎಂದು ಚುನಾವಣಾ ಆಯೋಗದ ವಕೀಲರು ತಿಳಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಈಗ ಅ.22ರಿಂದ ದೀರ್ಘ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ತೆರವಾದ ಕ್ಷೇತ್ರಗಳನ್ನು 6 ತಿಂಗಳಿಗಿಂತ ಹೆಚ್ಚು ಕಾಲ ಖಾಲಿ ಬಿಡುವಂತಿಲ್ಲ. ಹೀಗಾಗಿ 6 ತಿಂಗಳೊಳಗೆ ಸುಪ್ರೀಂ ಕೋರ್ಟ್‌ ಆದೇಶ ಪ್ರಕಟವಾಗಬೇಕಿದೆ.

ಶಾಸಕ ಸ್ಥಾನದ ಅನರ್ಹತೆಯನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟಿನಲ್ಲಿ ಅನರ್ಹರು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ತ್ವರಿತ ವಿಚಾರಣೆಗೆ ನಿರಾಕರಿಸಿತ್ತು. ಅಲ್ಲದೇ ಸೆ. 16ರಂದು ಪ್ರಕರಣ ವಿಚಾರಣೆಗೆ ಬಂದರೂ ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಪ್ರಕರಣ ವಿಚಾರಣೆ ಮುಂದೂಡಲಾಗಿತ್ತು. ಹೀಗಾಗಿ ಸೆ.22 ರಿಂದ ವಿಚಾರಣೆ ಆರಂಭಗೊಂಡಿತ್ತು.

Rebel MLAs B 1

ರಾಜ್ಯಗಳಲ್ಲಿ 15 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ಮುಂದಾಗಿತ್ತು. ನಾಮಪತ್ರ ಸಲ್ಲಿಕೆ ಮಾಡಲು ಸೆ.30 ಅಂತಿಮ ದಿನವಾಗಿತ್ತು. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 3 ಕಡೆಯ ದಿನಾಂಕವಾಗಿತ್ತು. ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅ.24 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿತ್ತು. ಹೀಗಾಗಿ ಸೆ.30ರ ಒಳಗಡೆ ಪ್ರಕರಣ ಇತ್ಯರ್ಥವಾಗದಿದ್ದರೆ ಅನರ್ಹರು ಸಂಕಷ್ಟಕ್ಕೆ ಸಿಲುಕವ ಸಾಧ್ಯತೆ ಇತ್ತು.

ಚುನಾವಣಾ ಆಯೋಗದ ಘೋಷಣೆಯಂತೆ ಹಿರೇಕೆರೂರು ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಯಶವಂತಪುರದ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡರ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಿತ್ತು.

Share This Article
Leave a Comment

Leave a Reply

Your email address will not be published. Required fields are marked *