Bengaluru CityDistrictsKarnatakaLatestMain Post

ಚಂಪಾ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ: ಸಿಎಂ ಸಂತಾಪ

ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನ ಚಂದ್ರಶೇಖರ್ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾದವರು. ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳುವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು ಎಂದು ಚಂಪಾ ಅವರನ್ನು ಸಿಎಂ ಬಣ್ಣಿಸಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

Leave a Reply

Your email address will not be published.

Back to top button