ನವದೆಹಲಿ: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಇಂದು ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಯಲಿದೆ.
ಇತ್ತೀಚೆಗಷ್ಟೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ರಾಜ್ಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯಲ್ಲಿ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಇಂದು ಮತ್ತೊಂದು ಹಂತದ ಚರ್ಚೆ ನಡೆಯಲಿದೆ. ಸಚಿವ ಸ್ಥಾನ, ಖಾತೆ ಹಂಚಿಕೆ ರಾಜ್ಯ ಉಸ್ತುವಾರಿ ನೀಡುವ ಬಗ್ಗೆ ಹಾಗೂ ಪೂರ್ಣಾವಧಿಗೆ ಕುಮಾರಸ್ವಾಮಿ ಸಿಎಂ ಆಗುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಮಹತ್ವದ ಸಭೆ ನಡೆಯುವ ಸಾಧ್ಯತೆ ಇದೆ.
Advertisement
ಇತ್ತೀಚೆಗೆ ನಡೆದ ಸಭೆಯಲ್ಲಿ ಕೆಲ ಗೊಂದಲಗಳು ಉಂಟಾದ ಹಿನ್ನೆಲೆ ಕುಮಾರಸ್ವಾಮಿ ಜೊತೆಗೆ ಮತ್ತೊಂದು ಹಂತದ ಸಭೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬರುವಂತೆ ರಾಹುಲ್ ಗಾಂಧಿ ಸೂಚಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ ಪರಮೇಶ್ವರ್, ರಾಜ್ಯ ಚುನಾವಣಾ ಉಸ್ತುವಾರಿ ಕೆ ವೇಣುಗೋಪಾಲ್ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
Advertisement
ಇತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ಎಚ್‍ಡಿಕೆ ದೆಹಲಿಗೆ ತೆರಳಲಿದ್ದು, ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಗೊಂದಲಗಳನ್ನು ಬಗೆಹರಿಸಿಕೊಂಡು ಬಳಿಕ ರಾಹುಲ್ ಗಾಂಧಿಯೊಂದಿಗೆ ಅಂತಿಮವಾಗಿ ಚರ್ಚಿಸಲು ತೀರ್ಮಾನಿಸಲಾಗಿದೆ. ಸದ್ಯ ರಾಹುಲ್ ಗಾಂಧಿ ವಿದೇಶ ಪ್ರವಾಸದ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಸರ್ಕಸ್ ಇನ್ನೂ ಒಂದು ವಾರಗಳ ಕಾಲ ಮುಂದುವರೆಯಲಿದ್ದು, ರಾಹುಲ್ ಪ್ರವಾಸದ ಬಳಿಕ ಸಚಿವರ ಪಟ್ಟಿ ಅಂತಿಮವಾಗಲಿದೆ.
Advertisement
ಕಾಂಗ್ರೆಸ್ ಮೂಲಗಳ ಪ್ರಕಾರ 16ರಿಂದ 18 ಹಾಗೂ 10 ಜನ ಜೆಡಿಎಸ್ ಶಾಸಕರು ಮಂತ್ರಿಗಳಾಗಿ ಶುಕ್ರವಾರ ಅಥವಾ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.