ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಶಿಕ್ಷಣ (Education) ಕ್ಷೇತ್ರದಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಖಾದರ್(U. T. Khader) ನೇತೃತ್ವದಲ್ಲಿ ಸಂಪುಟದ ಉಪಸಮಿತಿಯನ್ನು ರಚಿಸಿದೆ.
ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದಸ್ಯರಾಗಿದ್ದಾರೆ.
ಪರೀಕ್ಷೆ(Exam) ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಡಿವಾಣ, ಪರೀಕ್ಷಾ ಮತ್ತು ನೇಮಕಾತಿಗೆ ನಿಗದಿತ ವೇಳಾಪಟ್ಟಿ ರೂಪಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಸಮಿತಿ ಪರಿಶೀಲಿಸಲಿದೆ.
ಇದರೊಂದಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲಿನ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆಯೂ ಸಮಿತಿ ಶಿಫಾರಸುಗಳನ್ನು ನೀಡಲಿದೆ. ಇದನ್ನೂ ಓದಿ: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – ಕಲಬುರಗಿಯ ಇಬ್ಬರು ಸುರಕ್ಷಿತ
ಈ ಎಲ್ಲ ವಿಷಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳಿಗೆ ಸೂಕ್ತ ಪರಿಹಾರ ಮತ್ತು ಸುಧಾರಣಾ ಕ್ರಮಗಳ ಕುರಿತು ಸರ್ಕಾರಕ್ಕೆ ಉಪಸಮಿತಿ ಶಿಫಾರಸುಗಳನ್ನು ಸಲ್ಲಿಕೆ ಮಾಡಲಿದೆ.
