ಬೆಂಗಳೂರು: ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆಗೆ ಹಾಜರಾಗಬೇಕೆಂದು ಹೈಕೋರ್ಟ್ ಆದೇಶಿಸಿದೆ.
ಇಡಿ ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ಸಲ್ಲಿಸಿದ್ದ ತಕಾರರು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾ. ಅರವಿಂದ್ ಕುಮಾರ್ ಇಂದು ಆದೇಶ ಪ್ರಕಟಿಸಿದರು.
ಈ ಪ್ರಕರಣ ವಿಚಾರಣೆಗೆ ಯೋಗ್ಯವಾಗಿದೆ. ಚಿದಂಬರಂ ಅವರಂತೆ ಡಿಕೆ ಶಿವಕುಮಾರ್ ಸಹ ವಿಚಾರಣೆ ಎದುರಿಸಬೇಕು ಎಂದು ನ್ಯಾ.ಅರವಿಂದ್ ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಏನಿದು ಪ್ರಕರಣ?
2017ರ ಆಗಸ್ಟ್ 2 ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ದಾಖಲೆ ಇಲ್ಲದ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಅಪಾರ್ಟ್ ಮೆಂಟ್‍ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್‍ಗಳ ಸಹಾಯದಿಂದ ಡಿಕೆ ಶಿವಕುಮಾರ್ ಕೋಟ್ಯಂತರ ರೂ.ಗಳನ್ನು ಕಾಂಗ್ರೆಸ್ ಹೈಕಮಾಂಡ್‍ಗೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ನೋಟು ನಿಷೇಧಗೊಂಡ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಾವಿರಾರು ಕೋಟಿ ರೂ.ಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪುಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಮುಂದೇನಾಗಬಹುದು?
ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಬಹುದು. ಸೂಕ್ತ ರೀತಿಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣ ನೀಡಿ ಬಂಧಿಸಬಹುದು. ನೋಟಿಸ್ ನೀಡದೆಯೇ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಅಡಿಯಲ್ಲಿ ಬಂಧಿಸುವ ಅವಕಾಶ ಬಳಸಿಕೊಳ್ಳಬಹುದು. ಬೇನಾಮಿ ಅಥವಾ ಅಕ್ರಮ ಆಸ್ತಿ ಹೊಂದಿದ್ದರೆ ಫೆಮಾದಡಿ ಜಪ್ತಿ ಮಾಡಿಕೊಳ್ಳಬಹುದು. ಆರೋಪ ಸಾಬೀತಾದ್ರೆ 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಆಗಬಹುದು. ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆಯೂ ಇದೆ.