Valmiki Scam | ಸಿಬಿಐ ತನಿಖೆ ಕೋರಿ ಯೂನಿಯನ್‌ ಬ್ಯಾಂಕ್‌ ಸಲ್ಲಿಸಿದ್ದ ಅರ್ಜಿ ವಜಾ

Public TV
1 Min Read

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಕೋಟ್ಯಂತರ ರೂಪಾಯಿ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು  ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಬೆಂಗಳೂರು ಪೂರ್ವ ವಲಯದ ಸಿಬಿಐ ಡಿಜಿಎಂ ಜೆ. ಮಹೇಶ್ ಎಂಬುವವರು ಈ ಹಿಂದೆಯೇ  ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖ ಮಾಡಿದ್ದರು.

Rs 87 Crore Maharshi Valmiki Scheduled Tribe Development Corporation What is the Scam 1

ಯೂನಿಯನ್ ಬ್ಯಾಂಕ್‌ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿತ್ತು. ಈ ನಡುವೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿ ಆದೇಶಿಸಿತ್ತು. ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಈಗಾಗಲೇ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Share This Article