ಬೆಂಗಳೂರು: ವಿಧಾನ ಪರಿಷತ್ ಖಾಲಿ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ಜಿ.ನಮೋಜಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ.ಸಂಕನೂರ ಮತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.
ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಆಪ್ತನಾಗಿದ್ದ ಕೆ.ಎಂ.ಸುರೇಶ್ ಮೂರು ದಶಕಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.
ಹಾಲಿ ಎಂಎಲ್ಸಿ ಶಶೀಲ್ ನಮೋಶಿ ಅವರನ್ನು ಮತ್ತೆ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಈ ಕ್ಷೇತ್ರದಲ್ಲಿ ಮೇಲ್ಕಂಡ ಏಳು ಜಿಲ್ಲೆಗಳಲ್ಲಿನ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತದಾರರಾಗಿ ನೋಂದಾಯಿಸಿಕೊಂಡು ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ವಿಧಾನ ಪರಿಷತ್‌ಗೆ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ.

