ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮುಂದುವರಿದಿರುವ ಭಾರೀ ಮಳೆ (Heavy Rain) ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ವಿವಿಧ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲೂಕಿನಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಈ ರಜೆ ಆದೇಶವನ್ನು ಹೊರಡಿಸಿದ್ದಾರೆ.
ಶಿವಮೊಗ್ಗ
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲೂ ವರುಣನ ಆರ್ಭಟ ಜೋರಾಗಿದ್ದು ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇದನ್ನೂ ಓದಿ: ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ಹುಚ್ಚಾಟ: ಏಕಾಏಕಿ ಹೆಚ್ಚಿದ ನೀರು, ಬೆಂಗಳೂರಿನ ವಿದ್ಯಾರ್ಥಿಗಳ ರಕ್ಷಣೆ
ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಳಸ ಮತ್ತು ಕೊಪ್ಪ ತಾಲೂಕಿನಲ್ಲಿ ಅಂಗನವಾಡಿಯಿಂದ ಹಿಡಿದು ಪ್ರೌಢಶಾಲೆಯವರೆಗಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಬೆಳಗಾವಿ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
