– ಹಾವೇರಿಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ
ಹಾವೇರಿ: ಕೇರಳ ಸರ್ಕಾರ ಉದ್ದೇಶಪೂರ್ವಕವಾಗಿ ಅಲ್ಲಿನ ಪಟ್ಟಭದ್ರ ನಾಡದ್ರೋಹಿ ಸಂಘಟನೆಗಳಿಗೆ ಕುಮ್ಮಕ್ಕು ನೀಡಿ ಯಡಿಯೂರಪ್ಪನವರ ವಿರುದ್ಧ ಹೋರಾಟ ಮಾಡಿಸಿ ರಾಜ್ಯಕ್ಕೆ ಅವಮಾನ ಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ ಆಕ್ರೋಶ ವ್ಯಕ್ತಪಡಿಸಿದರು.
ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಾರು ತಡೆದು ಪ್ರತಿಭಟನೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಸಂಗೂರ ಕರಿಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
Advertisement
Advertisement
ಯಡಿಯೂರಪ್ಪನವರ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ರಾಜ್ಯದ 6 ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಇದನ್ನು ಕನ್ನಡಿಗರು ಯಾವತ್ತೂ ಸಹಿಸುವುದಿಲ್ಲ. ಕೂಡಲೇ ಕೇರಳ ಸರ್ಕಾರ ಕರ್ನಾಟಕದ ಮುಖ್ಯಮಂತ್ರಿಗಳ ಹಾಗೂ ಕನ್ನಡಿಗರಿಗೆ ಕ್ಷಮೆಯಾಚಿಸಬೇಕು. ಅಲ್ಲದೆ ಇತ್ತೀಚೆಗೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ಕರ್ನಾಟಕದ ಭಕ್ತರ ಮೇಲೆ ಪೊಲೀಸರ ಕಣ್ಣೆದುರಿನಲ್ಲಿಯೇ ಹಲ್ಲೆ ಮಾಡಲಾಗಿದೆ. ಇದು ಕೇರಳ ಸರ್ಕಾರಕ್ಕೆ ಶೋಭೆ ತರುವಂತಹದ್ದಲ್ಲ ಕೂಡಲೇ ಕೇರಳ ಸರ್ಕಾರ ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ಕೈಗೊಂಡು ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಮಂಜುನಾಥ ಓಲೇಕಾರ ಒತ್ತಾಯಿಸಿದರು.
Advertisement
ಸಿಎಂ ಯಡಿಯೂರಪ್ಪನವರು ಕೇರಳ ಪ್ರವಾಸ ಕೈಗೊಂಡಾಗ ಅಲ್ಲಿನ ಸರ್ಕಾರ ಸೂಕ್ತ ಭದ್ರತೆ ಒದಗಿಸದೇ ವ್ಯವಸ್ಥಿತವಾಗಿ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿದೆ ಎಂದು ಮಂಜುನಾಥ್ ಕಿಡಿಕಾರಿದರು.
Advertisement
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ನೂರಅಹ್ಮದ್ ಲಕ್ಷ್ಮೇಶ್ವರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಲ್ತಾಫ ನದಾಫ, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಸಿ.ಬಿ. ದೊಡ್ಡಗೌಡರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಾದೇವಪ್ಪ ಹೆಡಿಗ್ಗೊಂಡ, ಜಿಲ್ಲಾ ಕರವೇ ಮುಖಂಡ ಈರಣ್ಣ ಪಟ್ಟಣಶೆಟ್ಟಿ, ಹಾವೇರಿ ತಾಲೂಕು ಅಧ್ಯಕ್ಷ ಫಕ್ಕೀರೇಶ ಕಟ್ಟಿಮನಿ ಸೇರಿದಂತೆ ಇತರರು ಭಾಗವಹಿಸಿದ್ದರು.