ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‍ಗಳನ್ನು ಐಐಟಿಯಂತೆ (IIT) ಅಭಿವೃದ್ಧಿ ಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್‍ನಲ್ಲಿ ಘೋಷಿಸಿದ್ದಾರೆ.
ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ಗಳ ಉನ್ನತೀಕರಣಕ್ಕೆ ಒಟ್ಟು 30 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಘೋಷಿಸಲಾಗಿದೆ. ಇದನ್ನೂ ಓದಿ: GST ಸಂಗ್ರಹಣೆ 18% ಹೆಚ್ಚಳ – 2.8 ಶತಕೋಟಿ ಡಾಲರ್ FDI ಹೂಡಿಕೆ
ಬಜೆಟ್ ಘೋಷಣೆಗಳು
ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆಯಿಂದ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ನಿರ್ಧರಿಸಲಾಗಿದೆ. 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಆಗತ್ಯತೆಗನುಗುಣವಾಗಿ ತುಂಬಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು.
ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ವಿನೂತನ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಲು ಬೇರು-ಚಿಗುರು ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ತಮ್ಮ ಆವಿಷ್ಕಾರಗಳಿಗೆ ಪೇಟೆಂಟ್ ಪಡೆದುಕೊಳ್ಳಲು ಅಗತ್ಯವಾದ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡಲು 10 ಕೋಟಿ ರೂ.ಗಳ ನಿಧಿ ಸ್ಥಾಪಿಸಲಾಗುತ್ತದೆ. ವಿಷಯ ತಜ್ಞರು, ನಾಗರಿಕ ಸೇವಾ ಅಧಿಕಾರಿಗಳು ಮತ್ತು ಉದ್ಯಮಿಗಳಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಕಾರ್ಯಕ್ರಮದಡಿ ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದು ಬಜೆಟ್‍ನಲ್ಲಿ ಘೋಷಿಸಲಾಗಿದೆ.
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು 54 ಕೋಟಿ ರೂ. ವೆಚ್ಚದಲ್ಲಿ ಹಾಗೂ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣವನ್ನು 116 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: Karnataka State Budget 2024- ರಾಜ್ಯ ಬಜೆಟ್ ನಲ್ಲಿ ಬಸವಣ್ಣ: ಸಾಂಸ್ಕೃತಿಕ ನಾಯಕನಿಗೆ ಜೈಕಾರ