ಅಮರಾವತಿ: ಆಂಧ್ರಪ್ರದೇಶದ ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್‌ಗಾಗಿ ನಡೆದ ಗಲಾಟೆಯಲ್ಲಿ ಕನ್ನಡಿಗ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ (28) ಗಾಯಗೊಂಡಿದ್ದಾನೆ. ಮಾರಾಮಾರಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಈ ವೇಳೆ ನೂರಾರು ವಾಹನಗಳನ್ನು ಧ್ವಂಸಗೊಳಿಸಲಾಗಿದೆ. ಇದನ್ನೂ ಓದಿ: ಕೇಜ್ರಿವಾಲ್ ಮನೆ ಮೇಲೆ ದಾಳಿ- 8 ಮಂದಿ ಬಂಧನ
ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್‌ಗಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಆಂಧ್ರ ಮೂಲದ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ. ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕರ್ನಾಟಕ ಮೂಲದ ಅಂದಾಜು 200 ವಾಹನಗಳ ಗ್ಲಾಸ್‌ಗಳು ಜಖಂಗೊಂಡಿವೆ. ಕರ್ನಾಟಕ ಮೂಲದ ಕೆಲವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮೂಲದ ಭಕ್ತರ ಮೇಲೆ ರಾತ್ರಿ ಹಲ್ಲೆ ನಡೆಸಲಾಗಿದೆ. ರಾಯಚೂರು, ಬಾಗಲಕೋಟೆ, ಕಲಬುರಗಿ ಸೇರಿ ವಿವಿಧ ಜಿಲ್ಲೆಗಳ ಭಕ್ತರು ದೇವಸ್ಥಾನಕ್ಕೆ ತೆರಳಿದ್ದವು. ಅವರ ಮೇಲೆ ಹಲ್ಲೆ ನಡೆಸಿರುವುದಲ್ಲದೇ, ಅವರಿಗೆ ಸೇರಿದ ಕಾರುಗಳ ಗಾಜನ್ನು ಪುಡಿ ಪುಡಿ ಮಾಡಲಾಗಿದೆ. ಇದನ್ನೂ ಓದಿ: ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಪಾದಯಾತ್ರೆ ಮಾಡಿದ್ದರು. ರಾತ್ರಿ ವೇಳೆ ಕ್ಷುಲ್ಲಕ ಕಾರಣಕ್ಕೆ ಭಕ್ತರು ಹಾಗೂ ವ್ಯಾಪಾರಿಗಳ ನಡುವೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ಸ್ಥಳೀಯರಿಂದ ಭಕ್ತರ ಜೊತೆ ಹೊಡೆದಾಟವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ.