ಬೆಂಗಳೂರು: ಉಪಚುನಾವಣೆಯ ಸೋಲಿನ ನೈತಿಕ ಹೊಣೆಹೊತ್ತು ರಾಜ್ಯ ಉಸ್ತುವಾರಿ ನಾಯಕನ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಹುಣಸೂರು ಮತ್ತು ಶಿವಾಜಿನಗರದಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರವೇ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸಿಎಲ್‍ಪಿ ಮತ್ತು ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯರ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಗಾದಿ ತೊರೆದಿದ್ದರು. ಇಬ್ಬರ ನಡೆಯನ್ನ ಅನುಸರಿಸಿರುವ ವೇಣುಗೋಪಾಲ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ರವಾನಿಸಿ, ತಮ್ಮನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
Advertisement
Advertisement
ಎಐಸಿಸಿ ಡಿಸೆಂಬರ್ 14ರ ನಂತರ ರಾಜ್ಯ ಕಾಂಗ್ರೆಸ್ ಗೆ ನೂತನ ಸಾರಥಿಯನ್ನು ನೇಮಿಸುವ ಲೆಕ್ಕಾಚಾರದಲ್ಲಿದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಸರು ಬಲವಾಗಿ ಕೇಳಿ ಬಂದಿದೆ. ವಿಪಕ್ಷ ನಾಯಕನ ಸ್ಥಾನಕ್ಕಾಗಿ ಮಾಜಿ ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸಚಿವ ಹೆಚ್.ಕೆ.ಪಾಟೀಲ್ ರೇಸ್ ನಲ್ಲಿದ್ದಾರೆ. ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಮೂಲ ಕಾಂಗ್ರೆಸ್ ಗರಲ್ಲಿ ಪೈಪೋಟಿ ಏರ್ಪಟ್ಟಿದ್ದು, ದೆಹಲಿ ತಲುಪಿ ಲಾಬಿಗೆ ಮುಂದಾಗುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ