ಡಾಲಿ ಧನಂಜಯ (Dhananjay) ಅಭಿನಯದ ‘ಕೋಟಿ’ (Kotee) ಸಿನಿಮಾದ ಮೊದಲ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ (Kiccha Sudeep) ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು.
Advertisement
ಈಗಾಗಲೇ ‘ಕೋಟಿ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
Advertisement
Advertisement
ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
Advertisement
ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್ ಶೆಟ್ಟಿಯವರು ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.
ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.