ಮಡಿಕೇರಿ: ಆಂಧ್ರಪ್ರದೇಶ (Andhra Pradesh) ಹಾಗೂ ಬೆಂಗಳೂರು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆ, ಕೊಡಗು (Kodagu) ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.
ದೇಶದ ಕೆಲ ಭಾಗಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಕಾರಣ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅದರಂತೆ ಕೊಡಗು ಜಿಲ್ಲೆಯಲ್ಲೂ ತುರ್ತು ಸಭೆ ನಡೆಸಿ ಆಸ್ಪತ್ರೆಗಳ ಸಿದ್ಧತೆಯನ್ನು ಪರಿಶೀಲಿಸಲಾಗಿದೆ.
ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗಾಗಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ಸಿದ್ಧಪಡಿಸಲಾಗಿದೆ. ಒಟ್ಟು 40 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿರಿಸಲಾಗಿದ್ದು, ಮಹಿಳೆಯರು ಹಾಗೂ ಪುರುಷರ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.ಇದನ್ನೂ ಓದಿ: ಚುನಾವಣೆ ಮುಗಿದ ಮೇಲೆ ಅಳುವುದಕ್ಕಿಂತ ಈಗಲೇ ಮಾತುಕತೆ ನಡೆಸಿ – ಎಸ್‌ಪಿ ಜೊತೆ ಮೈತ್ರಿಗೆ ಓವೈಸಿ ಆಫರ್
ಇದರ ಜೊತೆಗೆ ವೈದ್ಯರು, ನರ್ಸ್‌ಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಇಲಾಖೆ ಸಂಪೂರ್ಣ ಸಜ್ಜಾಗಿದೆ.
ಆಸ್ಪತ್ರೆಯಲ್ಲಿ ಪಿಪಿಇ ಕಿಟ್, ಎನ್-95 ಮಾಸ್ಕ್, ಔಷಧಿ, ಸ್ಯಾನಿಟೈಸರ್ ಸೇರಿದಂತೆ ಕೋವಿಡ್ ಚಿಕಿತ್ಸೆಗೆ ಬೇಕಾದ ಎಲ್ಲಾ ಅಗತ್ಯ ವೈದ್ಯಕೀಯ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿದೆ.
ಜ್ವರ, ಕೆಮ್ಮು, ಗಂಟಲು ನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ವೈರಲ್ ಫೀವರ್‌ನೊಂದಿಗೆ ಬರುವ ರೋಗಿಗಳಿಗೂ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಪರಮೇಶ್ವರ್
ಕೋವಿಡ್ ಶಂಕಿತ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿ, ಅಗತ್ಯವಿದ್ದರೆ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯೂ ಮಾಡಲಾಗಿದೆ.
ಕೋವಿಡ್ ಮೊದಲ ಹಾಗೂ ಎರಡನೇ ಅಲೆಯ ಅನುಭವದ ಆಧಾರದ ಮೇಲೆ ಆರೋಗ್ಯ ಇಲಾಖೆ ಈ ಬಾರಿ ಕೂಡ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
