ಮಡಿಕೇರಿ: ಸಂಪಾಜೆಯಿಂದ (Sampaje) ಮಡಿಕೇರಿ (Madikeri) ನಡುವಿನ ಕರ್ತೋಜಿ ಭಾಗದ ರಾಷ್ಟ್ರೀಯ ಹೆದ್ದಾರಿ 275ರ ರಸ್ತೆಯ ಬಲಬದಿ ಗುಡ್ಡ ಕುಸಿಯುವ (Landslide) ಸಾಧ್ಯತೆ ಇದ್ದು, ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ್ ತಿಳಿಸಿದ್ದಾರೆ.
ಸಂಪಾಜೆಯಿಂದ ಮಡಿಕೇರಿ ನಡುವಿನ ಕಿಮೀ 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿಲ್ಲಾಡಳಿತಕ್ಕೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರ ನಿಷೇಧದ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: Shiradi Ghat: ವರುಣನ ಆರ್ಭಟ; ಶಿರಾಡಿಘಾಟ್ ರಸ್ತೆ ತಾತ್ಕಾಲಿಕ ಬಂದ್ – ಸಂಚಾರಕ್ಕೆ ಬದಲಿ ಮಾರ್ಗ!
ತುರ್ತು ಸೇವೆ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಮೂಲಕ ಮೈಸೂರು, ಬೆಂಗಳೂರು ಮೊದಲಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ – ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ – ಅಶೋಕ್ ಗುಡುಗು