ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ (Rain In Kodagu) ಮುಂದುವರಿದಿದ್ದು, ತೀವ್ರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದೆ.
ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರ ಮಳೆಯಿಂದಾಗಿ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ. ಹೀಗಾಗಿ ಹೊಸದಾಗಿ ನಿರ್ಮಿಸಿದ್ದ ಉದ್ಯಾನವನ ಸಂಪೂರ್ಣವಾಗಿ ಮುಳುಗಿದೆ. ಹೀಗೆ ಮಳೆ ಮುಂದುವರಿದರೆ ಭಗಂಡೇಶ್ವರ ದೇವಾಲಯದ ಮುಂಭಾಗದ ಆವರಣಕ್ಕೂ ನೀರು ನುಗ್ಗುವ ಸಾಧ್ಯತೆಗಳಿವೆ. ಅಲ್ಲದೇ ನಾಪೋಕ್ಲು-ಭಾಗಮಂಡಲ ರಸ್ತೆ ಜಲಾವೃತವಾಗುವ ಸಾಧ್ಯತೆ ಇದೆ.
ಬ್ರಹ್ಮಗಿರಿ ಬೆಟ್ಟ ತಲಕಾವೇರಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ, ಕನ್ನಿಕೆ ಸುಜ್ಯೋತಿ ನದಿಗಳು ತುಂಬಿ ಹರಿಯುತ್ತಿದ್ದು, ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಇದನ್ನೂ ಓದಿ: ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ
ಈಗಾಗಲೇ ಭಾಗಮಂಡಲ ನಾಪೋಕ್ಲು ರಸ್ತೆ ಮೇಲೆ ಒಂದು ಅಡಿ ನೀರು ಹರಿಯುತ್ತಿದೆ. ಸದ್ಯ ಮೇಲ್ಸೇತುವೆ ಆಗಿರುವ ಹಿನ್ನೆಲೆ ಜನರ ಓಡಾಟಕ್ಕೆ ತೊಂದರೆ ಇಲ್ಲ. ಜಿಲ್ಲೆಯಲ್ಲಿ ವರುಣಾರ್ಭಟ ಹೆಚ್ಚಾಗಿರುವುದರಿಂದ ಕೊಡಗಿನ ಮಡಿಕೇರಿ, ವಿರಾಜಪೇಟೆ ಪೊನ್ನಂಪೇಟೆಯ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.