ಬಾಗಲಕೋಟೆ: ಹಲವು ದಿನಗಳಿಂದ ಉಂಟಾಗಿರುವ ಪ್ರವಾಹದಿಂದ ಉತ್ತರ ಕರ್ನಾಟಕದ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗಿದೆ. ಅಲ್ಲದೆ, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆಯೂ ಮನವಿ ಮಾಡಿದ್ದೇವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.
ದೆಹಲಿಯಿಂದ ವಿಡಿಯೋ ಮೂಲಕ ಸಾರ್ವಜನಿಕರಿಗೆ ಸಂದೇಶ ಕಳುಹಿಸಿರುವ ಗೋವಿಂದ್ ಕಾರಜೋಳ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದೇವೆ. ಆದರೆ ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅಧಿಕಾರಿಗಳೊಂದಿಗೆ ಸಹಕರಿಸಿ ಸುರಕ್ಷಿತ ಸ್ಥಳಕ್ಕೆ ತೆರಳಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಘಟಪ್ರಭಾ ನದಿಯಲ್ಲಿ 1.60 ಲಕ್ಷಕ್ಕಿಂತಲೂ ಹೆಚ್ಚು ನೀರು, ಹರಿಯುತ್ತಿದೆ. ಪ್ರವಾಹ ಹೆಚ್ಚುತ್ತಿದೆ. ನದಿ ದಡದ ಹಳ್ಳಿ ಜನತೆ, ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಸರ್ಕಾರದಿಂದ ಎಲ್ಲ ಶಾಲಾ ಕಾಲೇಜುಗಳಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ. ಅಲ್ಲದೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಜಾನುವರುಗಳಿಗೂ ಮೇವಿನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಯಾವುದಕ್ಕೂ ಭಯ ಪಡದೆ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆಯೂ ಮನವಿ ಮಾಡಿದ್ದೇವೆ. ಆದರೆ ತಕ್ಷಣಕ್ಕೆ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಘಟಪ್ರಭಾದಲ್ಲಿ ಹಿಂದೆದು ಕಂಡರಿಯದ ಪ್ರವಾಹ ಬಂದಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಹೋಗಬೇಕು. ಮೈಮರೆತು ಕೂರದೇ ಅಧಿಕಾರಿಗಳೊಂದಿಗೆ ಸಹಕರಿಸಿ ಎಂದು ತಿಳಿಸಿದ್ದಾರೆ.