ಮಂಡ್ಯ: ಜಿಲ್ಲೆಯಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು,ಕೆಆರ್‌ಎಸ್ ಜಲಾಶಯದಿಂದ ಹೊರ ಬಿಡಲಾಗುತ್ತಿದ್ದ ಹೆಚ್ಚುವರಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಾವೇರಿ ನದಿ ಸೇರಿದಂತೆ ಹಲವು ನದಿಗಳು ಮೈದುಂಬಿ ಹರಿಯುತ್ತಿದ್ದವು. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್‍ಗೂ ಹೆಚ್ಚಿನ ನೀರು ಹರಿದು ಬರುತ್ತಿದ್ದರಿಂದ ಜಲಾಶಯ ಸಂಪೂರ್ಣವಾಗಿ ತುಂಬಿತ್ತು. ಇದರಿಂದಾಗಿ ಅಷ್ಟೇ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿತ್ತು. ಅಧಿಕ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ್ದರಿಂದ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಅಧಿಕಾರಿಗಳು ಸಹ ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ ನೀರಿನ ಮಟ್ಟವನ್ನು 121 ಅಡಿಗೆ ಕಾಯ್ದುಕೊಂಡಿದ್ದರು.
ಸದ್ಯ ಜಿಲ್ಲೆಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದರಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಭಾರೀ ಇಳಿಕೆ ಕಂಡಿದೆ. ಜಲಾಶಯಕ್ಕೆ ಶುಕ್ರವಾರದಿಂದ 21,170 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಇದಕ್ಕೆ ಸಮಾಂತರವಾಗಿ 21,202 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆಮಾಡಲಾಗುತ್ತಿದೆ.
ಮಳೆ ಕಡಿಮೆಯಾಗಿದ್ದರಿಂದ ಜಲಾಶಯವನ್ನು ಮತ್ತೆ ಸಂಪೂರ್ಣವಾಗಿ ಭರ್ತಿ ಮಾಡಲಾಗಿದ್ದು, ಶನಿವಾರದ ಮಾಹಿತಿಯಂತೆ ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದರೆ, ಸಂಗ್ರಹವಾದ ನೀರಿನ ಮಟ್ಟ 124.70 ಅಡಿಗಳಷ್ಟಾಗಿದೆ ಎಂದು ತಿಳಿದುಬಂದಿದೆ.
ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv